ಬೆಳಗಾವಿ: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿವಿ ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿವಿ ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ 'ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆ' ಉದ್ಘಾಟಿಸಿ ಮಾತನಾಡಿದ ಅವರು, ನೂರಾರು ಎಕರೆ ವಿಶಾಲವಾದ ಕ್ಯಾಂಪಸ್ಗಳು ಈಗ ಅಪ್ರಸ್ತುತವಾಗುತ್ತಿವೆ. ಆಧುನಿಕ ತಂತ್ರಜ್ಞಾನವು ಸಮರ್ಥವಾಗಿದ್ದು, ತುಂಬಾ ಕಡಿಮೆ ಜಾಗದಲ್ಲಿ ವಿವಿಗಳನ್ನು ಸ್ಥಾಪಿಸಲು ಸಾಧ್ಯವಿದೆ. ದೊಡ್ಡದೊಡ್ಡ ವಿವಿ ಗಳನ್ನು ಆರಂಭಿಸುವ ಬದಲು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಇರುವಂತೆ ನೋಡಿಕೊಳ್ಳುವುದಕ್ಕೆ ಸರ್ಕಾರ ಆದ್ಯತೆ ಕೊಟ್ಟಿದೆ ಎಂದು ನುಡಿದರು.