ಅಥಣಿ(ಬೆಳಗಾವಿ): ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಅಂದ್ರೆ ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನ ಬಂದಂತೆ ಮಾತಾಡುತ್ತಾರೆ. ಅವರಿಗೆ ಬಹಿರಂಗವಾಗಿ ಸವಾಲು ಹಾಕುತ್ತೇನೆ, ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಎಂದರೆ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.
ಇತ್ತಿಚಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಮೇಶ್ ಜಾರಕಿಹೊಳಿ ಬ್ಲಾಕ್ಮೇಲ್ ಮಾಡುತ್ತಾ ಇದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಇಲ್ಲದೇ ತಂತ್ರಗಾರಿಕೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದರು. ಇದಕ್ಕೆ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದೀಗ ಬಹಿರಂಗವಾಗಿ ಸವಾಲು ಹಾಕಿದ್ದಾರೆ.
ಶಾಸಕ ಮಹೇಶ್ ಕುಮಟಳ್ಳಿ ಸಚಿವಸ್ಥಾನದ ಬಗ್ಗೆ ಬಹಿರಂಗವಾಗಿ ಮಾತನಾಡುವುದಕ್ಕೆ ಬರುವುದಿಲ್ಲ. ನಾನು ಯಾವಾಗ ಮಂತ್ರಿ ಆಗುತ್ತೇನೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು. ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಸವದಿ ಅವರು ನಮ್ಮ ಪಕ್ಷದವರು, ನಾನು ಮಾತನಾಡೋದಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.