ಬೆಳಗಾವಿ: ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವ ಕಾರಣ ಗ್ರಾ.ಪಂ ಚುನಾವಣೆಯಲ್ಲಿ 100ಕ್ಕೆ 80 ರಷ್ಟು ಸ್ಥಾನ ಗೆಲ್ಲಲು ಎಲ್ಲ ಕಾರ್ಯಕರ್ತರು ಶ್ರಮ ಹಾಕಬೇಕು ಎಂದು ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ನಗರದ ಧರ್ಮನಾಥ ಭವನದ ಸಭಾಂಗಣದಲ್ಲಿ ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು, ಬೈಲಹೊಂಗಲ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆಯನ್ನು ಪಕ್ಷದ ಕಾರ್ಯಕರ್ತರು ಹಗುರವಾಗಿ ಪರಿಗಣಿಸಬಾರದು. ಗಂಭೀರವಾಗಿ ಪರಿಗಣಿಸಿ ಅತಿ ಹೆಚ್ಚು ಸ್ಥಾನದಲ್ಲಿ ಗೆಲ್ಲಬೇಕು ಎಂದು ಹೇಳಿದರು.
ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಎಲ್ಲ ಗ್ರಾಮಗಳಲ್ಲಿ ಸಂಚಾರ ಮಾಡುತ್ತಿದ್ದೇವೆ. ಗ್ರಾ.ಪಂ. ಚುನಾವಣೆಯಲ್ಲಿ ಜಾತಿ, ಭಾಷೆಯನ್ನು ಮರೆಯಬೇಕು. ಈ ಚುನಾವಣೆ ಬಹಳ ಮಹತ್ವದಾಗಿದ್ದು, ಮುಂಬರುವ 20 ವರ್ಷಗಳ ಕಾಲ ಬಿಜೆಪಿ ಪಕ್ಷಕ್ಕೆ ಭದ್ರ ಬುನಾದಿ ಹಾಕುವ ಕೆಲಸವಾಗಬೇಕಿದೆ. ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರದ್ದು, ಬಿಜೆಪಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ ಎಂದರು.
ಈ ವೇಳೆ, ಶಾಸಕ ಮಹಾಂತೇಶ ದೊಡ್ಡಗೌಡ, ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ್, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣಾ ಅಂಗಡಿ, ಮಾಜಿ ಶಾಸಕ ಸಂಜಯ ಪಾಟೀಲ ಉಪಸ್ಥಿತರಿದ್ದರು.