ಮೈಸೂರು:ರಾಜ್ಯದಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವ ಪೊಲೀಸರ ವಿರುದ್ಧ ಸಾರ್ವಜನಿಕರು ದೂರು ನೀಡುವ ವ್ಯವಸ್ಥೆಯನ್ನ ಶೀಘ್ರದಲ್ಲಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ರವಾನಿಸಿದ್ದಾರೆ.
ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರ ಮೇಲೆಯೇ ಕೆಲವೊಂದಷ್ಟು ದೂರುಗಳಿವೆ. ಇದನ್ನ ತಡೆಯುವುದು ಅನಿವಾರ್ಯವಾಗಿದೆ. ಪ್ರತಿ ಜಿಲ್ಲೆಯಲ್ಲೂ ಎರಡು ದೂರವಾಣಿ ಸಂಖ್ಯೆ ಸಮೇತ ಕೇಂದ್ರ ಸ್ಥಾಪನೆಗೆ ಮುಂದಾಗಿದ್ದೇವೆ. ಬೆಂಗಳೂರಿಗೆ ಹೋದ ತಕ್ಷಣ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸುತ್ತೇನೆ. ಜನಸ್ನೇಹಿ ಪೊಲೀಸ್ ದೃಷ್ಟಿಯಿಂದ ಈ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದರು.
ಮಂಗಳೂರಿನಲ್ಲಿ ನಡೆದ ನೈತಿಕ ಗಿರಿ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇಂತಹ ಪ್ರಕರಣ ನಡೆಯದಂತೆ ಕ್ರಮ ವಹಿಸಲಾಗುವುದು. ನೈತಿಕ ಪೊಲೀಸ್ ಗಿರಿ ನಡೆಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.