ಬಳ್ಳಾರಿ: ಕರ್ನಾಟಕದ 22 ಜಿಲ್ಲೆಯಲ್ಲಿ ಆರು ತಿಂಗಳಲ್ಲಿ 100ಕ್ಕಿಂತ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 103 ತಾಲೂಕುಗಳಲ್ಲಿ ಅತಿವೃಷ್ಠಿಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಗೋಣಿಬಸಪ್ಪ ತಿಳಿಸಿದರು.
22 ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಸಂಖ್ಯೆ ಎಷ್ಟು ಗೊತ್ತೇ? - ನೆರೆ ಪರಿಹಾರ
ರಾಜ್ಯದ 22 ಜಿಲ್ಲೆಯಲ್ಲಿ ಆರು ತಿಂಗಳಲ್ಲಿ 100ಕ್ಕಿಂತ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ನೀಡಬೇಕು ಎಂದು ಗೋಣಿ ಬಸಪ್ಪ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾಯ ಶ್ರೀಧರಗಡ್ಡೆ, ಕೊಳಗಲ್ಲು, ಹಡಗಲಿ ತಾಲೂಕಿನಲ್ಲಿ ಮೂವರು ಮರಣ ಹೊಂದಿದ್ದಾರೆ. ರೈತರು ಹಾಗೂ ಕೂಲಿ ಕಾರ್ಮಿಕರು ಸಂಪೂರ್ಣವಾಗಿ ಬೀದಿಗೆ ಬಿದ್ದಿದ್ದಾರೆ. ಇದರಿಂದಾಗಿ ರಾಜ್ಯ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕಿತ್ತು. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಉಡುಪಿ ಮತ್ತು ಚಿಕ್ಕಮಗಳೂರಿನಿಂದ ಹಮ್ಮಿಕೊಂಡಿರುವ ಬೈಕ್ ರ‌್ಯಾಲಿ ಅಕ್ಟೊಬರ್ 14ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ತಲುಪಲಿದೆ. ಅಂದೇ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು.
ಕತ್ತಲಲ್ಲಿ ದಿನ ದೂಡುತ್ತಿರುವ ಸಂತ್ರಸ್ತರ ಬದುಕನ್ನು ಅರಿತುಕೊಳ್ಳುವ ಶಕ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗಿಲ್ಲವೇ ಎಂದು ಪ್ರಶ್ನಿಸಿದ ಅವರು, ಬಳ್ಳಾರಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮೆಣಸಿನಕಾಯಿ, ಹತ್ತಿ, ಕಡಲೆ ಬೆಳೆ ಸಂಪೂರ್ಣ ಹಾನಿಯಾಗಿದೆ. ವೈಜ್ಞಾನಿಕವಾಗಿ ರೈತರಿಗೆ ಎಷ್ಟು ನಷ್ಟವಾಗಿದೆ ಎಂಬುದನ್ನು ಪರಿಶೀಲಿಸಿ ಪರಿಹಾರ ನೀಡಬೇಕು.ರೈತ ಆತ್ಮಹತ್ಯೆ ಮಾಡಿಕೊಂಡರೇ ಆ ಕುಟುಂಬಕ್ಕೆ ₹ 25 ಲಕ್ಷ, ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.