ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಲೋಕಾಯುಕ್ತರ ತನಿಖಾ ವರದಿ ಆಧರಿಸಿ ಕ್ರಮ ಕೈಗೊಳ್ಳಲು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ವಿವಿಧ ಇಲಾಖೆಗಳ 24 ಸಕ್ಷಮ ಪ್ರಾಧಿಕಾರಗಳನ್ನು ಪ್ರತಿವಾದಿಯಾಗಿ ಸೇರಿಸಿದ್ದು, ಎಲ್ಲ ಪ್ರಾಧಿಕಾರಗಳಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಭ್ರಷ್ಟಾಚಾರ ಪ್ರಕರಣಗಳಲ್ಲಿ ಲೋಕಾಯುಕ್ತರು ವರದಿ ಸಲ್ಲಿಸಿದ್ದರೂ, ಆ ವರದಿ ಆಧರಿಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿ ನಗರದ ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮಾ.15ರಂದು ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಲೋಕಾಯುಕ್ತರ ವರದಿಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಹೊಂದಿರುವ ಸಂಬಂಧಪಟ್ಟ ಇಲಾಖೆ ಹಾಗೂ ಸಂಸ್ಥೆಗಳ ಸಕ್ಷಮ ಪ್ರಾಧಿಕಾರಗಳನ್ನೂ ಅರ್ಜಿಯಲ್ಲಿ ಪ್ರತಿವಾದಿಯಾಗಿ ಸೇರಿಸುವಂತೆ ಅರ್ಜಿದಾರರ ಪರ ವಕೀಲ ಜಿ. ಆರ್. ಮೋಹನ್ ಅವರಿಗೆ ಸೂಚಿಸಿತ್ತು.
ನ್ಯಾಯಾಲಯದ ಸೂಚನೆಯಂತೆ ಅರ್ಜಿದಾರರ ಪರ ವಕೀಲರು ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ 24 ಸಕ್ಷಮ ಪ್ರಾಧಿಕಾರಗಳನ್ನು ಪ್ರತಿವಾದಿ ಪಟ್ಟಿಯಲ್ಲಿ ಸೇರಿಸಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಪರಿಗಣಿಸಿರುವ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತ ಹಾಗೂ ಎಲ್ಲ ಸಕ್ಷಮ ಪ್ರಾಧಿಕಾರಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜೂ.4ಕ್ಕೆ ಮುಂದೂಡಿದೆ.
ಪ್ರತಿವಾದಿ ಸಕ್ಷಮ ಪ್ರಾಧಿಕಾರಗಳು: ಅರಣ್ಯ ಮತ್ತು ಪರಿಸರ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಇಂಧನ ಇಲಾಖೆ, ಸಣ್ಣ ನೀರಾವರಿ ಮತ್ತು ಜಲ ಸಂಪನ್ಮೂಲ ಇಲಾಖೆ, ಅಂಗವಿಕಲರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಹಿಂದುಳಿದ ವರ್ಗಗಳ ಕ್ಷೇಮಾಭಿಚೃದ್ಧಿ ಇಲಾಖೆ, ಗೃಹ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ, ಸಾರಿಗೆ ಇಲಾಖೆ, ಮಾಹಿತಿ ಮತ್ತು ಪ್ರವಾಸೋದ್ಯಮ ಇಲಾಖೆ, ವಸತಿ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆಗಳ ಕಾರ್ಯದರ್ಶಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಮತ್ತು ಕೆಪಿಟಿಸಿಎಲ್, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಪ್ರತಿವಾದಿಯಾಗಿಸಲಾಗಿದೆ.
ಅರ್ಜಿದಾರರ ಕೋರಿಕೆ :ಸಾರ್ವಜನಿಕ ಸೇವಕರ ವ್ಯಾಪ್ತಿಗೆ ಬರುವ ಸರ್ಕಾರಿ ನೌಕರರ ವಿರುದ್ಧ ಕೇಳಿ ಬರುವ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಿ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಲೋಕಾಯುಕ್ತ ಕಾಯ್ದೆ ಪ್ರಕಾರ ವರದಿ ಸಲ್ಲಿಸಿದ 3 ತಿಂಗಳಲ್ಲಿ ಅದನ್ನು ಪರಿಶೀಲಿಸಿ ಸಕ್ಷಮ ಪ್ರಾಧಿಕಾರಗಳು ತಪ್ಪಿತಸ್ಥ ನೌಕರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ, ರಾಜ್ಯದಲ್ಲಿ ಸಾವಿರಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಲೋಕಾಯುಕ್ತ ವರದಿ ಸಲ್ಲಿಕೆಯಾಗಿ ವರ್ಷಗಳೇ ಕಳೆದಿದ್ದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.