ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ರಚನೆಯಾಗಿದೆ. ಇಂದು 29 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಜುಲೈ 28ರಂದು ಅಸ್ತಿತ್ವಕ್ಕೆ ಬಂದ ಬಸವರಾಜ ಬೊಮ್ಮಾಯಿ ಅವರ ಏಕ-ಸದಸ್ಯ ಸಚಿವ ಸಂಪುಟ ಪೂರ್ಣ ಪ್ರಮಾಣದ ರೂಪ ಪಡೆಯಿತು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಪ್ರಮಾಣ ವಚನ ಸಮಾರಂಭದಲ್ಲಿ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಉಮೇಶ್ ವಿಶ್ವನಾಥ ಕತ್ತಿ. ಎಸ್. ಅಂಗಾರ, ಜೆ. ಸಿ. ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಸಿ.ಸಿ. ಪಾಟೀಲ್, ಆನಂದ್ ಸಿಂಗ್, ಕೋಟ ಶ್ರೀನಿವಾಸ್ ಪೂಜಾರಿ, ಪ್ರಭು ಚೌಹಾಣ್, ಮುರುಗೇಶ್ ರುದ್ರಪ್ಪ ನಿರಾಣಿ, ಅರೆಬೈಲ್ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಬಿ. ಎ. ಬಸವರಾಜ ( ಬೈರತಿ ಬಸವರಾಜ್ ), ಡಾ. ಕೆ. ಸುಧಾಕರ್, ಕೆ. ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಎನ್. ನಾಗರಾಜ್ (ಎಂಟಿಬಿ ನಾಗರಾಜ್) ಕೆ ಸಿ ನಾರಾಯಣಗೌಡ, ಬಿ ಸಿ ನಾಗೇಶ್, ವಿ. ಸುನೀಲ್ ಕುಮಾರ್, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಮುನಿರತ್ನ ಅವರು ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸುಮಾರು 75 ನಿಮಿಷಗಳ ಕಾಲ ನಡೆದ ಈ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಡಾ ಉಮೇಶ್ ಜಾಧವ್ ಒಳಗೊಂಡಂತೆ ಗಣ್ಯಾತಿ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದು, ನೂತನ ಸಚಿವರಿಗೆ ಅಭಿನಂದಿಸಿದರು.