ಬೆಂಗಳೂರು:ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ದೇಶವ್ಯಾಪಿ ಮುಷ್ಕರ ಸೋಮವಾರ ಆರಂಭವಾಗಿದ್ದು, ಇಂದೂ ಕೂಡ ರಾಜ್ಯದ ವಿವಿಧೆಡೆ ಬ್ಯಾಂಕಿಂಗ್ ಮತ್ತು ಸಾರಿಗೆ ಸೇವೆಗಳು ಭಾಗಶಃ ಸ್ಥಗಿತಗೊಂಡಿದ್ದವು.
ಮುಷ್ಕರಕ್ಕೆ ಐಎನ್‌ಟಿಯುಸಿ, ಎಐಟಿಯುಸಿ, ಹೆಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್ಇಡಬ್ಲ್ಯುಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದವು. ದೇಶದಾದ್ಯಂತ ಒಟ್ಟು 20 ಕೋಟಿಗೂ ಹೆಚ್ಚು ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಒಕ್ಕೂಟ ಹೇಳಿದೆ. ದೇಶವ್ಯಾಪಿ ಕರೆ ನೀಡಿರುವ ಮುಷ್ಕರ ಬೆಂಬಲಿಸಿ ನಗರದಲ್ಲಿ ಹಲವು ಕಡೆ ಪ್ರತಿಭಟನೆಗಳು ನಡೆದವು.
ನಗರದ ಹಲವೆಡೆ ಪ್ರತಿಭಟನೆ:ಕೇಂದ್ರ ಸರ್ಕಾರದ ಕಾರ್ಮಿಕ ರೈತ ವಿರೋಧಿ ಧೋರಣೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತ, ಕೆನರಾ ಬ್ಯಾಂಕ್ ಮುಖ್ಯ ಕಚೇರಿ, ಜೆ.ಸಿ.ರಸ್ತೆಯಲ್ಲಿರುವ ಎಲ್‌ಐಸಿ ಕಚೇರಿ, ಫ್ರೀಡಂ ಪಾರ್ಕ್‌ನಲ್ಲಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಘೋಷಣಾ ಫಲಕಗಳನ್ನು ಪ್ರದರ್ಶಿಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.