ಬೆಂಗಳೂರು: ನಗರದ ಘನತ್ಯಾಜ್ಯ ನಿರ್ವಹಣೆಗಾಗಿ ಪ್ರತ್ಯೇಕ ಕಂಪನಿ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕಾನೂನು ವ್ಯಾಪ್ತಿಯಲ್ಲಿ ಪರಿಶೀಲಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಘನತ್ಯಾಜ್ಯ ನಿರ್ವಹಣೆಯಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಆರೋಪಿಸಿ ವಿವಿಧ ಸಂಘಸಂಸ್ಥೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರ ಬೆಂಗಳೂರು ನಗರದ ಘನತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಕಂಪನಿ ಆರಂಭಿಸಲು ನಿರ್ಧಾರ ಕೈಗೊಂಡಿದೆ. ಆದರೆ, ವಾಸ್ತವವಾಗಿ ಘನತ್ಯಾಜ್ಯ ನಿರ್ವಹಣಾ ಅಧಿನಿಯಮಗಳು-2016ರ ಅಡಿಯಲ್ಲಿ ಇಂತದ್ದೊಂದು ಸಂಸ್ಥೆ ಆರಂಭಿಸಲು ಸಾಧ್ಯವೇ ಎಂಬುದರ ಕುರಿತು ಪರಿಶೀಲಿಸಬೇಕಿದೆ. ಆ ನಿಟ್ಟಿನಲ್ಲಿ ಜುಲೈ 28ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತು.ಅಲ್ಲದೆ, ಪಾಲಿಕೆ ಘನತ್ಯಾಜ್ಯ ನಿರ್ವಹಣೆಗೆ ಕ್ರಿಯಾ ಯೋಜನೆ ಇಲ್ಲದೆ ಹೇಗೆ ವಿಲೇವಾರಿ ಮಾಡುತ್ತಿದೆ ಎಂದು ಅಚ್ಚರಿ ವ್ಯಕ್ತಪಡಿಸಿತು.