ಬೆಂಗಳೂರು: ಭ್ರಷ್ಟಾಚಾರ ಪ್ರಕರಣದ ಆರೋಪಿಯ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರು ತಮ್ಮ ವಿರುದ್ಧ ಮಾಡಿರುವ ಟೀಕೆ, ಟಿಪ್ಪಣಿಗಳನ್ನು ಹಾಗು ಸೇವಾ ದಾಖಲಾತಿ ಕೇಳಿರುವ ಆದೇಶ ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಹಿಂಪಡೆದಿದ್ದಾರೆ. ಬುಧವಾರ, ಹೈಕೋರ್ಟ್ನಲ್ಲಿ ಸೀಮಂತ್ ಕುಮಾರ್ ಸಿಂಗ್ ಪರ ವಕೀಲ ಶ್ರೀನಿವಾಸ್ ರಾವ್ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಮತ್ತು ಸಿ.ಎಂ.ಪೂಣಚ್ಚ ನೇತೃತ್ವದ ವಿಭಾಗೀಯ ಪೀಠವು ಪರಿಗಣಿಸಿ ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.
ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂ ವ್ಯಾಜ್ಯ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಉಪ ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರನ್ನು ಎಸಿಬಿ ಬಂಧಿಸಿತ್ತು. ಉಪ ತಹಶೀಲ್ದಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯ ವೇಳೆ ನ್ಯಾ.ಹೆಚ್.ಪಿ.ಸಂದೇಶ್ ಅವರು ತಮ್ಮನ್ನು ಕುರಿತು ಆದೇಶದಲ್ಲಿ ಉಲ್ಲೇಖಿಸಿರುವ ಆಕ್ಷೇಪಾರ್ಹ ಅಂಶಗಳನ್ನು ಕೈಬಿಡುವಂತೆ ಕೋರಿ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಸುಪ್ರೀಂಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ(ಎಸ್‌ಎಲ್‌ಪಿ) ಸಲ್ಲಿಸಿದ್ದರು.