ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಜನಾಧಿಕಾರ ಸಂಘರ್ಷ ಪರಿಷತ್ ಮುಖ್ಯಸ್ಥ ಆದರ್ಶ ಆರ್. ಐಯ್ಯರ್ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸರ್ಕಾರದ ಮುಖ್ಯಕಾರ್ಯದರ್ಶಿ, ಸಿಬಿಐ ಹಾಗೂ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ನಮೂದಿಸಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಇದನ್ನೂ ಓದಿ...ಜ.18 ರಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿ: ಕರಡು ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ
ಪ್ರಕರಣದ ಆರೋಪಿಗಳು ಅತ್ಯಂತ ಪ್ರಭಾವಿಗಳಾಗಿದ್ದಾರೆ. ಹಾಗೆಯೇ, ಮುಖ್ಯಮಂತ್ರಿ ಕುಟುಂಬದವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಅರ್ಜಿದಾರರ ಆರೋಪ: 2019ರ ಸೆಪ್ಟೆಂಬರ್ 2 ಮತ್ತು 17ರಂದು ಖಾಸಗಿ ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ ಹಾಗೂ ಕೆಲ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪ್ರಸಾರ ಮಾಡಿತ್ತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಪುತ್ರ, ಮೊಮ್ಮಗ ಹಾಗೂ ಅಂದಿನ ಬಿಡಿಎ ಆಯುಕ್ತರು ಸೇರಿ ಹಲವು ಸರ್ಕಾರಿ ಅಧಿಕಾರಿಗಳು ದೊಡ್ಡಮಟ್ಟದ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿ ಮಾಡಿತ್ತು. ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಸರ್ಕಾರದ ಆಡಳಿತ ಯಂತ್ರ ಮತ್ತು ಮುಖ್ಯಮಂತ್ರಿಗಳ ಕುಟುಂಬದವರ ವಿರುದ್ಧದ ಆರೋಪವಾಗಿದೆ.
ಈ ಸಂಬಂಧ ಪೊಲೀಸರಿಗೆ ಹಾಗೂ ಎಸಿಬಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಹಾಗೆಯೇ, ಈ ಆರೋಪಗಳ ಸಂಬಂಧ ತನಿಖೆ ನಡೆಸಲು ಸಿಬಿಐಗೆ ಪ್ರಕರಣ ಒಪ್ಪಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.