ಬೆಂಗಳೂರು: ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯದ ನಿರ್ದೇಶನದಂತೆ ಮತ್ತೊಂದು ವಿಶೇಷ ನ್ಯಾಯಾಲಯ ಸ್ಥಾಪಿಸಿ ಅಧಿಸೂಚನೆ ಹೊರಡಿಸಿದ್ದೇವೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಶೀಘ್ರ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಲಿಖಿತ ಮಾಹಿತಿ ನೀಡಿ, ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ವಿಶೇಷ ನ್ಯಾಯಾಲಯದಲ್ಲಿ ಸೆಷನ್ಸ್ ನ್ಯಾಯಾಧೀಶರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.