ಬೆಂಗಳೂರು: ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಸಂಬಂಧ 6 ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ.
ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಸರ್ಕಾರದ ಪರ ವಕೀಲರು ಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿ 2021ರ ಆ.13ರಂದು ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶದಂತೆ ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಪ್ರಯೋಗಾಲಯಕ್ಕೆ ಮೂಲಸೌಕರ್ಯ ಒದಗಿಸುವ ವಿಚಾರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. 8 ರಿಂದ 10 ವಾರ ಕಾಲಾವಕಾಶ ನೀಡಿದರೆ ನ್ಯಾಯಾಲಯದ ಆದೇಶದ ಪೂರ್ಣ ಪಾಲನೆ ಮಾಡಲಾಗುವುದು ಎಂದು ತಿಳಿಸಿದರು.
ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಇದಕ್ಕೆ ಆಕ್ಷೇಪಿಸಿದ ಪೀಠ, ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ ಅಂದರೆ ಏನರ್ಥ. ಅಧಿಸೂಚನೆ ಹೊರಡಿಸುವುದು, ಕ್ರಮ ಕೈಗೊಳ್ಳಲು ಸೂಚಿಸುವುದು. ಪತ್ರ ಬರೆಯುವುದೆಲ್ಲಾ ಕೋರ್ಟ್ ಆದೇಶ ಪಾಲಿಸಿದಂತಲ್ಲ. ನ್ಯಾಯಾಲಯದ ಆದೇಶ ಪಾಲನೆ ಹಾಳೆಗಳಲ್ಲಿ ಮಾತ್ರವೇ ಕಾಣುತ್ತಿದೆ. ವಾಸ್ತವದಲ್ಲಿ ಏನೂ ಆಗಿರುವಂತೆ ಕಾಣುತ್ತಿಲ್ಲ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಅಲ್ಲದೆ ನ್ಯಾಯಾಲಯ ಈ ಹಿಂದೆ ನೀಡಿರುವ ನಿರ್ದೇಶನ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಸಂಬಂಧಪಟ್ಟ ಇಲಾಖೆಗೆ ಅನುಕೂಲವಾಗಲಿದೆ ಎಂಬುದನ್ನು ಸರ್ಕಾರ ಮನದಟ್ಟು ಮಾಡಿಕೊಳ್ಳಬೇಕು. ಕೋರ್ಟ್ ಆದೇಶ ಪಾಲಿಸಿ ಹುದ್ದೆಗಳ ಭರ್ತಿ ಮತ್ತು ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಂಡರೆ ರಾಜ್ಯದ ನ್ಯಾಯಾಲಯಗಳಲ್ಲಿನ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ನ್ಯಾಯಾಲಯ ನೀಡಿರುವ ನಿರ್ದೇಶವನ್ನು ಶೀಘ್ರವಾಗಿ ಪಾಲಿಸಬೇಕು ಎಂದು ತಾಕೀತು ಮಾಡಿ, ವಿಚಾರಣೆ ಮುಂದೂಡಿತು.