ಬೆಂಗಳೂರು: ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿಂದು ಧರ್ಮೇಂದ್ರ ಪ್ರಧಾನ್ ಅವರನ್ನು ವಿ.ಸುನಿಲ್ ಕುಮಾರ್ ಹಾಗು ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು.
ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡಿದರೆ ಮಾತ್ರ ಅದು ರಚನಾತ್ಮಕ ಕಾರ್ಯಚಟುವಟಿಕೆ ಹಮ್ಮಿಕೊಳ್ಳಲು ಸಾಧ್ಯ ಎಂಬ ಸಂಗತಿಯನ್ನು ಕೇಂದ್ರ ಸಚಿವರಿಗೆ ಮನದಟ್ಟು ಮಾಡಿಕೊಡಲಾಗಿದೆ. ಕೇಂದ್ರ ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಅವರು ತಿಳಿಸಿದ್ದಾರೆ.