ಬೆಂಗಳೂರು: ರಾಜ್ಯದಲ್ಲಿ ಕಾಳ್ಗಿಚ್ಚಿನಂತೆ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಇದೇ ಮಂಗಳವಾರ (ಜುಲೈ 14) ರಾತ್ರಿ 8 ಗಂಟೆಯಿಂದ ಒಂದು ವಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಜುಲೈ 22ರ ಬೆಳಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಇರಲಿದೆ.
ಬೆಂಗಳೂರಲ್ಲಿ ಕೋವಿಡ್ 19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಲಾಕ್ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇದೇ ಮಂಗಳವಾರ ಅಂದರೆ ಜುಲೈ 14ರ ರಾತ್ರಿ 8 ಗಂಟೆಯಿಂದ 1 ವಾರ ಕಾಲ ಸಂಪೂರ್ಣ ಲಾಕ್‌ಡೌನ್ ಮಾಡುವ ದೃಢ ನಿರ್ಧಾರವನ್ನು ಸರ್ಕಾರ ಕೈಕೊಂಡಿದೆ.
ಈ ಸಂಬಂಧ ಸಿಎಂ ಯಡಿಯೂರಪ್ಪ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಜುಲೈ 14 ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಗ್ಗೆ 5 ಗಂಟೆ ವರೆಗೆ ಒಂದು ವಾರ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರಲಿದೆ ಎಂದು ಹೇಳಿದ್ದಾರೆ.
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಲು ಸಹಕರಿಸಿ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸುವಂತೆ ಸಿಎಂ ಮನವಿ ಮಾಡಿದ್ದಾರೆ.
ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿ ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19ರ ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.