ಬೆಂಗಳೂರು:ನಗರದಲ್ಲಿ ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಶನಿವಾರ ಎಲ್ಲಾ ವಿಶೇಷ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಳವಾಗುತ್ತಿದ್ದು, ಪ್ರಮುಖವಾಗಿ ಹೊರ ವಲಯಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಈ ಸಂಬಂಧ ಹೆಚ್ಚು ಪ್ರಕರಣಗಳು ಕಂಡುಬರುವ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಉಲ್ಬಣವಾಗದಂತೆ ತ್ವರಿತಗತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಯುಕ್ತರು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ 38ಸಾವಿರ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಇದೇ ರೀತಿ ರೋಗ ಲಕ್ಷಣಗಳಿರುವ, ಐಎಲ್ಐ, ಎಸ್ಎಆರ್ಐ ಲಕ್ಷಣಗಳಿರುವವರನ್ನು ಗುರುತಿಸಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಲು ಕ್ರಮ ಕೈಗೊಳ್ಳಬೇಕು. ಎಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತವೆಯೋ ಅಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡಿ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಯಬೇಕು ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಪ್ರಥಮ/ದ್ವಿತೀಯ ಸಂರ್ಪಕಿತರ ಪತ್ತೆ ಕಾರ್ಯ ಸರಿಯಾಗಿ ಮಾಡಬೇಕು. ಅದಕ್ಕಾಗಿ ಪಾಲಿಕೆಯ ಕಂದಾಯ, ಇಂಜಿನಿಯರ್ ಹಾಗೂ ಇನ್ನಿತರೆ ಅಧಿಕಾರಿಗಳನ್ನು ಬಳಸಿಕೊಂಡು ಸಂಪರ್ಕ ಪತ್ತೆ ಕಾರ್ಯವನ್ನು ಸರಿಯಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ಸೋಂಕು ಪತ್ತೆಯಾದ ಬಳಿಕ ಎಲ್ಲಿ ಪ್ರಕರಣ ಕಂಡುಬಂದಿದೆಯೋ ಅಲ್ಲಿ ಪಾಲಿಕೆಯ ಕಣ್ಗಾವಲು ತಂಡವು ಸರಿಯಾಗಿ ಕೆಲಸ ಮಾಡಬೇಕು ಎಂದರು.