ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಕೈ ನಾಯಕರ ಸಭೆ ನಗರದಲ್ಲಿ ನಡೆದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಯಿತು. ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಚನ್ನರಾಜ ಹಟ್ಟಿಹೊಳಿ, ಮಹಾಂತೇಶ್ ಕೌಜಲಗಿ, ಮಾಜಿ ಶಾಸಕ ಫಿರೋಜ್ ಸೇಠ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಭಾರಿ ಫೈಟ್ ಕೊಟ್ಟಿದ್ದ ಕಾಂಗ್ರೆಸ್, ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ತಂತ್ರಗಾರಿಕೆ ರೂಪಿಸುವ ಕಾರ್ಯಾರಂಭಿಸಿದೆ. ಉಪಚುನಾವಣೆಯಲ್ಲಿ ತೋರಿಸಿದ ಪೈಪೋಟಿಯನ್ನೇ ಮುಂದಿನ ಎಲ್ಲಾ ಚುನಾವಣೆಯಲ್ಲೂ ತೋರಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ.