ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೋಪಿನಾಥ್ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದರು.
ಕಂದಾಯ ಭವನದಲ್ಲಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಗೋಪಿನಾಥ್, ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಸಂಸದರಾದ ಡಿ.ವಿ.ಸದಾನಂದ ಗೌಡ, ಪಿ.ಸಿ.ಮೋಹನ್, ಸಚಿವ ಅಶ್ವತ್ಥ ನಾರಾಯಣ, ಶಾಸಕರಾದ ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಮುಖಂಡ ಎನ್.ಆರ್.ರಮೇಶ್ ಸಮ್ಮುಖದಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸಂಸದ ಡಿ.ವಿ.ಸದಾನಂದ ಗೌಡ, 'ನಮ್ಮ ಪಕ್ಷದಿಂದ ಪರಿಷತ್ ಚುನಾವಣೆಗೆ ಬೆಂಗಳೂರಿಂದ ಗೋಪಿನಾಥ್ ರೆಡ್ಡಿ ಸ್ಪರ್ಧಿಸಿದ್ದಾರೆ. ಅತ್ಯಂತ ಸಜ್ಜನ, ಪ್ರಾಮಾಣಿಕ ಗೋಪಿನಾಥ್ರಿಗೆ ಟಿಕೆಟ್ ಕೊಡಲಾಗಿದೆ. ಗೋಪಿನಾಥ್ ರೆಡ್ಡಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ದೊಡ್ಡ ಅಂತರದಲ್ಲಿ ಗೆಲ್ಲಲಿದ್ದಾರೆ. ಈ ಸಲ ನಮ್ಮ ಪಕ್ಷ ಹೆಚ್ಚು ಸ್ಥಾನ ಗಳಿಸುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, 'ಗೋಪಿನಾಥ್ ಅವರು ಬಿಜೆಪಿಯ ಹಳೆಯ ಕಾರ್ಯಕರ್ತರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರೇರೇಪಿತರಾದವರು. ಕಳೆದ ಸಲ ಅಲ್ಪ ಅಂತರದಲ್ಲಿ ಸೋಲಬೇಕಾಯಿತು, ಈ ಸಲ ದೊಡ್ಡ ಅಂತರದಲ್ಲಿ ಗೆಲ್ಲಲಿದ್ದಾರೆ' ಎಂದರು.