ಬೆಂಗಳೂರು:ರಾಜ್ಯಸಭೆ ಮತ್ತು ವಿಧಾನಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡುವ ಸಂಬಂಧ ನಾಳೆ ರಾಜ್ಯ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ.
ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ... ಅಭ್ಯರ್ಥಿ ಆಯ್ಕೆ ಕುರಿತು ಮಹತ್ವದ ಚರ್ಚೆ! - ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಸಂಜೆ 5 ಗಂಟೆಗೆ ರಾಜ್ಯಸಭೆ ಮತ್ತು ವಿಧಾನಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡುವ ಸಂಬಂಧ ಮಹತ್ವದ ಸಭೆ ನಡೆಯಲಿದೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭಾ ಸ್ಥಾನಕ್ಕೆ ಆಕಾಂಕ್ಷಿಗಳು ಹೆಚ್ಚಾಗಿದ್ದು, ಯಾರನ್ನು ಆಯ್ಕೆ ಮಾಡಬೇಕು. ಯಾರಿಗೆ ಟಿಕೆಟ್ ಫೈನಲ್ ಮಾಡಬೇಕು ಎನ್ನುವ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇದೇ ವೇಳೆ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮಾಲೋಚನೆ ನಡೆಸಲಾಗುತ್ತದೆ. ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ ವಿಷಯಗಳ ಆಧಾರದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ಗೆ ರವಾನೆ ಮಾಡಲಾಗುತ್ತದೆ. ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಪ್ರಕಟ ಮಾಡಲಿದೆ.
ಬಿಜೆಪಿ ಕೋರ್ ಕಮಿಟಿ ಸಭೆ ಹಿನ್ನೆಲೆಯಲ್ಲಿ, ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿ ಪರವಾಗಿ ಲಾಭಿ ಮುಂದುವರಿಸಿದ್ದಾರೆ. ಕೋರ್ ಕಮಿಟಿ ಸದಸ್ಯರು ಆದ ಸಚಿವ ಜಗದೀಶ್ ಶೆಟ್ಟರ್ ನಿವಾಸಕ್ಕೆ ಸಹೋದರ ರಮೇಶ್ ಕತ್ತಿ ಜೊತೆ ತೆರಳಿದ ಉಮೇಶ್ ಕತ್ತಿ, ಕೋರ್ ಕಮಿಟಿ ಸಭೆಯಲ್ಲಿ ತಮ್ಮ ಪರ ಒಲವು ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಸಹೋದರನಿಗೆ ರಾಜ್ಯಸಭಾ ಟಿಕೆಟ್ ಕಲ್ಪಿಸಬೇಕು ಈ ಸಂಬಂಧ ಸಭೆಯಲ್ಲಿ ವಿಷಯ ಪ್ರಸ್ತಾಪ ಆದಾಗ ನಮ್ಮ ಪರ ಮಾತುಕತೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿರುವ ಶಾಸಕ ಉಮೇಶ್ ಕತ್ತಿ, ಇದೀಗ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿದ್ದು, ರಮೇಶ್ ಕತ್ತಿ ಅವರಿಗೆ ಟಿಕೆಟ್ ನಿರ್ಧಾರ ನಾಳೆ ಅಂತಿಮಗೊಳ್ಳಲಿದೆ.