ಬೆಂಗಳೂರು: ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲಂಚ ಪ್ರಕರಣವೊಂದರಲ್ಲಿ ಭಾಗಿಯಾಗಿರುವ ಗಂಭೀರ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿತ್ತು. ಈ ಕ್ರಮಕ್ಕೆ ಆಡಳಿತ ಪಕ್ಷ ಬಿಜೆಪಿಯ ಶಾಸಕರೂ ಆಗಿರುವ ಹಾಗು ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಐಎಎಸ್ ಅಧಿಕಾರಿ ಮಂಜುನಾಥ್ ಅವರು ಈ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಕ್ಷ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಕೆಲವರು ಕುತಂತ್ರ ನಡೆಸಿ ಅವರನ್ನು ಸಿಲುಕಿಸುವ ಷಡ್ಯಂತ್ರ ನಡೆಸಿರುವ ಸಾಧ್ಯತೆ ಇದೆ" ಎಂದು ತಿಳಿಸಿದ್ದಾರೆ.