ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹೈಕಮಾಂಡ್ ಹೆಸರು ಪ್ರಕಟಿಸುತ್ತಿದ್ದಂತೆ ಬಾಬುರಾವ್ ಚಿಂಚನಸೂರ್ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಮೊದಲು ಬಿಎಸ್ವೈ ಅಧಿಕೃತ ನಿವಾಸ ಕಾವೇರಿಗೆ ಕುಟುಂಬಸಮೇತ ಆಗಮಿಸಿದ ಚಿಂಚನಸೂರ್ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದರು.
ಬಿಜೆಪಿಗೆ ಕರೆತಂದು ಟಿಕೆಟ್ ಕೊಟ್ಟು ಸೋತರೂ ನಿಗಮ ಮಂಡಳಿಯಲ್ಲಿ ಅವಕಾಶ ನೀಡಿ ಈಗ ಪರಿಷತ್ ಟಿಕೆಟ್ ಸಿಗಲು ಕಾರಣರಾಗಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ನಂತರ ಕುಟುಂಬಸಮೇತ ಆರ್.ಟಿ.ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೆ ಭೇಟಿ ನೀಡಿ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಕೆಲಕಾಲ ಸಿಎಂ ಜೊತೆ ಮಾತುಕತೆ ನಡೆಸಿದರು.