ಬೆಂಗಳೂರು:ಭಾರತೀಯ ವೈದ್ಯಕಿಯ ಸಂಶೋಧನಾ ಪರಿಷತ್ತು (ಐಸಿಎಂಆರ್) ಬ್ಲ್ಯಾಕ್ ಫಂಗಸ್ ಸೋಂಕು ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಜೂನ್ 9ರಂದು ಹೊರಡಿಸಿರುವ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಆಸ್ಪತ್ರೆಗಳಿಗೆ ತಲುಪಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕೋವಿಡ್ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 1,947 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 157 ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರ 22,050 ಚುಚ್ಚುಮದ್ದು ಹಂಚಿಕೆ ಮಾಡಿದ್ದು, ಈವರೆಗೆ 19,950 ಡೋಸ್‌ಗಳನ್ನು ತಲುಪಿಸಿದೆ. ಪ್ರತಿ ಸೋಂಕಿತರಿಗೆ 6 ರಿಂದ 8 ವಾರಗಳಲ್ಲಿ 30 ವಯಲ್ಸ್ ನೀಡುವುದು ಅಗತ್ಯವಿದೆ. ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್ ಜೂನ್ 9ರಂದು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ ಎಂದರು.