ಬೆಂಗಳೂರು:ರಾಜ್ಯದ ವಿಚಾರಣಾ ನ್ಯಾಯಾಲಯಗಳಲ್ಲಿ ಶಾಸಕರು-ಸಂಸದರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿರುವ ರೀತಿಯಲ್ಲೇ ಜನಪ್ರತಿನಿಧಿಗಳು ದಾಖಲಿಸಿರುವ ಪ್ರಕರಣಗಳನ್ನೂ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕಿದೆ ಎಂದು ಹೈಕೋರ್ಟ್ ಪ್ರಕರಣವೊಂದರ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.
ಸುಪ್ರೀಂ ಕೋರ್ಟ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸ್ಥಾಪಿಸುವ ವೇಳೆ ಚುನಾಯಿತ ಜನಪ್ರತಿನಿಧಿಗಳು ತಮಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ಮೇಲೆ ಪ್ರಭಾವ ಬೀರಬಹುದು ಎಂಬುದನ್ನು ಗಮನದಲ್ಲಿಟ್ಟುಕೊಂಡೇ ಆದೇಶ ಮಾಡಿದೆ. ಇದನ್ನು ಗಮನಿಸಿದಾಗ ಶಾಸಕರು ಮತ್ತು ಸಂಸದರು ದೂರು ನೀಡಿರುವ ಪ್ರಕರಣಗಳ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ ಜನ ಪ್ರತಿನಿಧಿಗಳು ದಾಖಲಿಸಿರುವ ಪ್ರಕರಣಗಳನ್ನೂ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮಾಜಿ ಸಚಿವ ಎಸ್.ಎ ರಾಮದಾಸ್, ತಮ್ಮ ಖಾಸಗಿ ವಿಷಯವಾಗಿ ಏರ್ಪಟ್ಟಿದ್ದ ಗದ್ದಲಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ಮೈಸೂರಿನ ವಿಚಾರಣಾ ನ್ಯಾಯಾಲಯ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2018ರ ಜೂನ್ 17 ರಂದು ವರ್ಗಾವಣೆ ಮಾಡಿ ಆದೇಶಿಸಿತ್ತು.
ಈ ವರ್ಗಾವಣೆ ಕ್ರಮ ಪ್ರಶ್ನಿಸಿ ರಾಮದಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ವಿಚಾರಣೆ ಸಂದರ್ಭದಲ್ಲಿ ರಾಮದಾಸ್ ಪರ ವಾದಿಸಿದ್ದ ಹಿರಿಯ ವಕೀಲರು, ಸುಪ್ರೀಂ ಕೋರ್ಟ್, ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯವನ್ನು ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಿದೆ. ಹೀಗಾಗಿ ರಾಮದಾಸ್ ದಾಖಲಿಸಿರುವ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿರುವ ಕ್ರಮ ಸರಿಯಲ್ಲ ಎಂದು ವಾದಿಸಿದ್ದರು. ಆದರೆ, ವಾದ ತಿರಸ್ಕರಿಸಿರುವ ಹೈಕೋರ್ಟ್, ಪ್ರಕರಣವನ್ನು ವರ್ಗಾವಣೆ ಮಾಡಿರುವ ಕ್ರಮ ಸರಿಯಿದೆ ಎಂದಿದೆ.