ಬೆಂಗಳೂರು:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ರ ಸೆಕ್ಷನ್ 5 ಜಾರಿಗೊಳಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ, ಹೈಕೋರ್ಟ್ಗೆ ಮನವಿ ಮಾಡಿದೆ.
ಹತ್ಯೆಗಾಗಿ ಜಾನುವಾರುಗಳನ್ನು ಸಾಗಣೆ ಮಾಡುವುದನ್ನು ನಿರ್ಬಂಧಿಸುವ ಈ ನಿಯಮ ಜಾರಿಗೊಳಿಸಲು ಸರ್ಕಾರ ಲಿಖಿತ ಮನವಿ ಸಲ್ಲಿಸಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ಅದನ್ನು ಮೂರು ವಾರಗಳಲ್ಲಿ ದಾಖಲಿಸುವಂತೆ ಹೈಕೋರ್ಟ್ ಅರ್ಜಿದಾರರಿಗೆ ಸೂಚಿಸಿದೆ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಆರೀಫ್ ಜಮೀಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪೀಠಕ್ಕೆ ಮನವಿ ಮಾಡಿ, ಕಾಯ್ದೆಯ ಸೆಕ್ಷನ್ 5ನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಜಾರಿಗೊಳಿಸುವುದಿಲ್ಲ ಎಂದು ಸರ್ಕಾರ ಈ ಮೊದಲು ಭರವಸೆ ನೀಡಿದೆ. ಆದ್ದರಿಂದ ನಿಯಮ ಜಾರಿಗೊಳಿಸಲು ಸಮ್ಮತಿಸುವಂತೆ ಕೋರಿದರು.