ಬೆಂಗಳೂರು:ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸಗಳ ಮೇಲಿನ ಸಿಬಿಐ ದಾಳಿ ದ್ವೇಷದ ರಾಜಕಾರಣಕ್ಕೆ ಸೂಕ್ತ ಉದಾಹರಣೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮೇಲೆ ದ್ವೇಷದ ರಾಜಕಾರಣ ನಿರಂತರವಾಗಿ ನಡೆಯುತ್ತಿದೆ. ಭ್ರಷ್ಟಾಚಾರದ ವಿರುದ್ಧ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿ. ಆದರೆ ಇಲ್ಲಿ ಆ ರೀತಿ ನಡೆದಿಲ್ಲ. ಇದೆಲ್ಲವನ್ನೂ ಕಾಂಗ್ರೆಸ್ ಸವಾಲಾಗಿ ಸ್ವೀಕರಿಸುತ್ತದೆ ಎಂದರು.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು ಶಾಸಕ ಹೆಚ್.ಕೆ. ಪಾಟೀಲ್ ಮಾತನಾಡಿ, ಪ್ರತಿಪಕ್ಷಗಳನ್ನು ದಮನ ಮಾಡುವುದಕ್ಕೆ ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐ ತನಿಖಾ ಸಂಸ್ಥೆಗಳ ಬಳಕೆ ಮಾಡಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವೆಂದು ಆತಂಕ ವ್ಯಕ್ತಪಡಿಸಿದರು.
ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ, ಪ್ರವಾಹ ವಿಚಾರವಾಗಿ ಮಾತನಾಡಿದ ಅವರು, ಈವರೆಗೂ ಪರಿಹಾರ ಸಿಕ್ಕಿಲ್ಲ. ಮತ್ತೆ ಮಳೆ ಪ್ರಾರಂಭವಾಗಿದೆ. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಜನರಿಗೆ ತುಂಬಾ ತೊಂದರೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.