ಬೆಂಗಳೂರು :ಸರ್ಕಾರದ ಸಮಯ ಹಾಳು ಮಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಹೈಕೊರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಈ ಕುರಿತು ವಕೀಲ ಡಾ. ಎಸ್. ಉಮೇಶ್ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯ, ಮಾಹಿತಿ ಮತ್ತು ಪ್ರಸರಣ ಸಚಿವಾಲಯ, ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಅರ್ಜಿದಾರರ ಕೋರಿಕೆ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹಾದಿ ತಪ್ಪುತ್ತಿದೆ. ಇದೇ ವಿಚಾರವಾಗಿ ಸದನದಲ್ಲೂ ಚರ್ಚೆ ಮಾಡಿ ಅಮೂಲ್ಯ ಸಮಯ ವ್ಯರ್ಥ ಮಾಡಲಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ. ರಾಜ್ಯ ಸರ್ಕಾರದ ಆಡಳಿತ ಯಂತ್ರವೂ ದುರ್ಬಲಕೊಂಡಿದೆ ಎಂದು ಆರೋಪಿಸಲಾಗಿದೆ.