ಬೆಂಗಳೂರು:ಉತ್ತರ ಪ್ರದೇಶದ ಮುಖ್ಯಮಂತ್ರಿ ಹಾಗೂ ರಾಜ್ಯಸ್ಥಾನದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದ ಕಲ್ಯಾಣ್ ಸಿಂಗ್ ನಿಧನಕ್ಕೆ ರಾಜ್ಯ ಬಿಜೆಪಿ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಸಂತಾಪ ಸಂದೇಶ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಟ್ವೀಟ್ನಲ್ಲಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ರಾಜಸ್ಥಾನದ ಮಾಜಿ ರಾಜ್ಯಪಾಲರಾಗಿದ್ದ ಕಲ್ಯಾಣ್ ಸಿಂಗ್ ಅವರು ನಿಧನರಾದ ವಿಷಯ ತುಂಬಾ ದುಃಖ ತಂದಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ತಮ್ಮ ಸಂದೇಶದಲ್ಲಿ, ಕಲ್ಯಾಣ್ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇತರರಿಗೆ ಅನುಕರಣೀಯವಾಗಿವೆ. ರಾಜ್ಯಪಾಲರಾಗಿಯೂ ಅವರು ಸೇವೆಯನ್ನು ಸಲ್ಲಿಸಿದ್ದಾರೆ. ಅಂಥ ಮೇಧಾವಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.