ಬೆಂಗಳೂರು : ನಗರದಲ್ಲಿ ಸುರಿದ ಭಾರಿ ಮಳೆಯ ನಡುವೆಯೂ ಸಿಎಂ ಬಸವರಾಜ್ ಬೊಮ್ಮಾಯಿ ತೋಟಗಾರಿಕಾ ಸಚಿವ ಮುನಿರತ್ನ ಪ್ರತಿನಿಧಿಸುವ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿನ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಕಾರ್ಯಕ್ರಮಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವ ಮುನಿರತ್ನ ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದರು ಎಂದು ಹಾಡಿ ಹೊಗಳಿ ಪರೋಕ್ಷವಾಗಿ ಕಾರ್ಯಕ್ರಮದಲ್ಲಿ ಕೇಳಿ ಬಂದ ಕಾಂಗ್ರೆಸ್ ಪರ ಕೂಗಿಗೆ ಮತ್ತು ಆರೋಪಗಳಿಗೆ ಉತ್ತರ ನೀಡಿದ್ರು.
ಸಂಜೆಯ ಭಾರಿ ಮಳೆಯಲ್ಲಿ ಮೊದಲ ಕಾರ್ಯಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಯಶವಂತಪುರದಲ್ಲಿ ನೂತನವಾಗಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್ ಹಾಗೂ 300 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆ ಉದ್ಘಾಟನೆ ಮಾಡಿದರು. ಬಿ.ಕೆ. ನಗರದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ವಸತಿ ನಿರ್ಮಾಣ ಕಾಮಗಾರಿಯ ಮೊದಲನೇ ಹಂತದ ಉದ್ಘಾಟನೆ ಹಾಗೂ 2ನೇ ಹಂತದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿದರು.