ಬೆಂಗಳೂರು: ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರಿ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಈ ಸಂಬಂಧ ಆರ್.ಟಿ. ನಗರದ ತಮ್ಮ ನಿವಾಸದ ಬಳಿ ಮಾತನಾಡಿರುವ ಸಿಎಂ, ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಕೋವಿಡ್ ಉಲ್ಬಣವಾಗಿದೆ. ಕೇರಳದಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಇದನ್ನು ಗಮನಿಸಿ ಶೀಘ್ರದಲ್ಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಇಂದು ಸಂಜೆ ಸಭೆ ನಡೆಸುತ್ತೇವೆ. ಜೊತೆಗೆ ಹೊಸ ತಳಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಸಚಿವ, ಆರೋಗ್ಯ ಇಲಾಖೆ, ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಗಳು, ಕೋವಿಡ್ ತಜ್ಞರು ಪಾಲ್ಗೊಳ್ಳಲಿದ್ದಾರೆ ಎಂದರು.
ಕೋವಿಡ್ ಮುಂಜಾಗ್ರತಾ ಕ್ರಮಗಳು:ರಾಜ್ಯದಲ್ಲಿ ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕ್ರಮಗಳು, ಸಾರ್ವಜನಿಕವಾಗಿಯೂ ಕೈಗೊಳ್ಳುವ ಕ್ರಮಗಳ ಬಗ್ಗೆ, ತುರ್ತು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಿದ್ದೇವೆ. ಹೊಸ ತಳಿ ಸಂಬಂಧ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸ್ತೇವೆ. ಚರ್ಚೆ ಬಳಿಕ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿವುದಾಗಿ ಹೇಳಿದರು.
ಸಭೆಯಲ್ಲಿ ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ. ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಡಿಸಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲು ಸೂಚನೆ ನೀಡಲಾಗಿದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರನ್ನೂ ಸಭೆಗೆ ಆಹ್ವಾನಿಸಲಾಗಿದೆ.
ಕಲಬುರಗಿ ಆಯುಕ್ತ ಸ್ನೇಹಲ್ ಕಂಡೇಲ್ ವಿರುದ್ಧ ಯುವತಿ ದೂರು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಕಚೇರಿಗೆ ಹೋಗಿ ಗಮನಿಸ್ತೇನೆ. ಯುವತಿಯ ದೂರು ಏನೆಂದು ಗಮನಿಸಿ ಮಾಹಿತಿ ಪಡೆದುಕೊಳ್ಳುತ್ತೇನೆ. ಆ ಬಗ್ಗೆ ಪೊಲೀಸ್ ಇಲಾಖೆ ತನಿಖೆ ಮಾಡಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಧಾರವಾಡ ಎಸ್‌ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ 77 ಮಂದಿಗೆ ಕೋವಿಡ್ ದೃಢ!
ಸರ್ಕಾರದಲ್ಲಿ ಅನೇಕ ಕಡತಗಳ ವಿಲೇವಾರಿ ವಿಳಂಬ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೆಲವು ಇಲಾಖೆಗಳಲ್ಲಿ ಫೈಲ್ ಗಳು ವಿಲೇವಾರಿ ಆಗಿಲ್ಲ. ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದ ಈ ಫೈಲ್ ಗಳ ನಿರ್ಣಯ ಆಗಿಲ್ಲ. ಈ ಬಗ್ಗೆ ಈಗಾಗಲೇ ಒಂದು ಸಭೆ ನಡೆಸಿದ್ದೇನೆ. ಯಾವೆಲ್ಲ ಕಾನೂನು ತೊಡಕುಗಳಿವೆ, ತಾಂತ್ರಿಕ ತೊಡಕುಗಳಿವೆ ಅಂತ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪರಿಶೀಲಿಸಲು ಮುಖ್ಯ ಕಾರ್ಯದರ್ಶಿ ಅವರಿಗೆ ತಿಳಿಸಿದ್ದೇನೆ. ಕಾನೂನು ಇಲಾಖೆ, ಕಾನೂನು ಸಚಿವರಿಂದಲೂ ಅಭಿಪ್ರಾಯ ಕೇಳಿದ್ದೇನೆ ಎಂದರು.