ನವದೆಹಲಿ: ರಾಜ್ಯಸಂಪುಟ ರಚನೆ ಕುರಿತು ಮಾತುಕತೆ ನಡೆಸಲು ಹೈಕಮಾಂಡ್ ಭೇಟಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಂಜೆ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ಪಡೆದುಕೊಂಡು ಬರಲಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿಯಲ್ಲಿ ಸಂತೋಷ್ ಜೊತೆ ಬೊಮ್ಮಾಯಿ ಮಾತುಕತೆ ಸಂಪುಟ ರಚನೆ ಸರ್ಕಸ್ ಆರಂಭಿಸಿರುವ ಸಿಎಂ ಬೊಮ್ಮಾಯಿ ನಿನ್ನೆ ರಾತ್ರಿಯೇ ನವದೆಹಲಿಗೆ ತೆರಳಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಿನ್ನೆ ರಾತ್ರಿ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿದ್ದ ಸಿಎಂ, ಇಂದು ಕೂಡ ಕೇಂದ್ರದ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಇಂದು ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿಗೆ ಸಮಯಾವಕಾಶ ನಿಗದಿಯಾಗಿದ್ದು, ಬಹುತೇಕ ಈ ಸಭೆಯಲ್ಲಿಯೇ ಸಚಿವರ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಹೇಳಲಾಗ್ತಿದೆ.