ಬೆಂಗಳೂರು :ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 3% ರಿಂದ 7.5%ಗೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪಾಲ್ಗೊಂಡಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಭಾಗಿಯಾಗಿ ಚರ್ಚೆ ನಡೆಸಿದರು.
ಪ್ರತಿಭಟನಾನಿರತ ಸ್ವಾಮೀಜಿಗಳ ಮನವೊಲಿಕೆ ಮಾಡಲು ಯಡಿಯೂರಪ್ಪ ಸಲಹೆ ನೀಡಿದರು. ನ್ಯಾ.ಸುಭಾಷ್ ಆಡಿ ನೇತೃತ್ವದ ಆಯೋಗದ ವರದಿ ಬರುವ ತನಕ ಪರಿಸ್ಥಿತಿಯನ್ನು ನಿಭಾಯಿಸಲು ಸಚಿವರಿಗೆ ಸೂಚನೆ ನೀಡಿದರು.
ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 40 ದಿನಗಳಿಂದ ಹೋರಾಟ ನಡೆಸಲಾಗುತ್ತಿದ್ದು, ಈ ಸಂಬಂಧ ಮೀಸಲಾತಿ ಹೆಚ್ಚಳ ಕುರಿತು ನಾಳೆ ಮಹತ್ವದ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ನಾಳೆ ಅಧಿಕಾರಿಗಳು ಮತ್ತು ಸಮುದಾಯದ ಶಾಸಕರ ಸಭೆ ನಿಗದಿ ಮಾಡಲಾಗಿದೆ.
ಗುರುವಾರ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ಸದಸ್ಯರಾದ ರಘುಮೂರ್ತಿ, ತುಕಾರಾಮ್, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ ಆಗ್ರಹಿಸಿದ್ದರು.
ಈ ಸಂಬಂಧ ರಚನೆಯಾದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುವಂತೆ ಇವರು ಒತ್ತಾಯಿಸಿದ್ದರು. ನಾಗಮೋಹನ್ ದಾಸ್ ವರದಿಯನ್ನು ಸರ್ಕಾರ ಬಂದ ತಕ್ಷಣ ಜಾರಿಗೊಳಿಸುವುದಾಗಿ ಹೇಳಿದ್ದರೂ, ಇನ್ನೂ ಜಾರಿಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಇದಕ್ಕೆ ಉತ್ತರಿಸಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು, ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಸುಭಾಷ್ ಆಡಿಯ ನೇತೃತ್ವದ ತ್ರಿಸದಸ್ಯ ಸಮಿತಿ ಆದಷ್ಟು ಬೇಗ ವರದಿ ನೀಡಬೇಕು ಎಂದು ವಿನಂತಿ ಮಾಡುತ್ತೇನೆ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ.
ನಾನು ಅದಕ್ಕೆ ಬದ್ಧನಾಗಿದ್ದೇನೆ. ಈ ಬಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸುತ್ತೇನೆ. ಆಡಿ ನೇತೃತ್ವದ ತ್ರಿಸದಸ್ಯರ ಸಮಿತಿ ಆದಷ್ಟು ಶೀಘ್ರದಲ್ಲಿ ವರದಿ ಕೊಡುವಂತೆ ಮನವಿ ಮಾಡುತ್ತೇನೆ. ವಿಳಂಬವಾದರೆ ನಾಗಮೋಹನ್ ದಾಸ್ ಕೊಟ್ಟ ವರದಿಯನ್ನೇ ಜಾರಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುವುದಾಗಿ ಭರವಸೆ ನೀಡಿದರು.
ಸಚಿವರ ಉತ್ತರ ಸಮರ್ಪಕವಾಗಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದ್ದರು. ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಈ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು.
ಓದಿ :ದಕ್ಷಿಣ ಕಾಶಿ ಅಂತರಗಂಗೆ ಅಭಿವೃದ್ಧಿ ಕ್ರಮ : ಪ್ರವಾಸೋದ್ಯಮದ ಸಚಿವ ಆನಂದ್ ಸಿಂಗ್