ಕಲಬುರಗಿ/ಬೆಂಗಳೂರು:ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇಂದು ಸಂಜೆ ಕೋವಿಡ್ ಬಗ್ಗೆ ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಲಾಕ್‌ಡೌನ್ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಸಭೆಗೆ ಆಹ್ವಾನ ನೀಡಲಾಗಿದೆ ಎಂದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಹೆಚ್ಚಾಗಿದೆ. ಪಕ್ಕದ ರಾಜ್ಯದಲ್ಲಿ ಹೆಚ್ಚಾದಾಗ ಸಹಜವಾಗಿಯೇ ನಮ್ಮ ರಾಜ್ಯದಲ್ಲಿ ಹೆಚ್ಚಾಗುತ್ತದೆ. ಇದರ ಬಗ್ಗೆ ಕಟ್ಟೆಚ್ಚರ ವಹಿಸಬೇಕಿದ್ದು, ಗಡಿ ಭಾಗಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇನ್ನಷ್ಟು ಕಟ್ಟೆಚ್ಚರ ವಹಿಸುವ ಅವಶ್ಯಕತೆ ಇದೆ. ಗಡಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಮತ್ತು ಒಮಿಕ್ರಾನ್ ಪ್ರಕಣಗಳು ಹೆಚ್ಚಾಗುತ್ತಿವೆ. ಬರುವ ದಿನದಲ್ಲಿ ಸುದೀರ್ಘ ಕ್ರಮ ಕೈಗೊಳ್ಳಬೇಕು. ಔಷಧ ಸೇರಿದಂತೆ ಎಲ್ಲ ವ್ಯವಸ್ಥೆ ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.