ಬೆಂಗಳೂರು: ನಿಷೇಧದ ಬಳಿಕವೂ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜೆಪಿ ಶಾಸಕರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಆರ್.ಟಿ. ನಗರದ ಖಾಸಗಿ ನಿವಾಸದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ನಡೆಸುತ್ತಿರುವ ಸಭೆಯಲ್ಲಿ ಬೆಂಗಳೂರು ಶಾಸಕರ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಕೂಡ ಪಾಲ್ಗೊಂಡಿದ್ದಾರೆ.
ಬೆಂಗಳೂರಿಗೆ ಪಾದಯಾತ್ರೆ ಬಾರದಂತೆ ತಡೆಯುವ ಕುರಿತು ಚರ್ಚೆ..
ಪಾದಯಾತ್ರೆ ನಿರ್ಬಂಧಿಸುವಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಾಳೆ ಹೈಕೋರ್ಟ್ ನಲ್ಲಿ ನಡೆಯಲಿದ್ದು, ಈ ವೇಳೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪಾದಯಾತ್ರೆ ನಿಷೇಧಿಸಿ ಸರ್ಕಾರ ಕಳೆದ ರಾತ್ರಿಯೇ ಆದೇಶ ಹೊರಡಿಸಿದೆ. ಆದರೂ ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ನಿರಾಕರಿಸಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಅವರು ಬೆಂಗಳೂರು ಶಾಸಕರ ಅಭಿಪ್ರಾಯ ಪಡೆಯುತ್ತಿದ್ದು, ಬೆಂಗಳೂರಿಗೆ ಪಾದಯಾತ್ರೆ ಬಾರದಂತೆ ತಡೆಯುವ ಕುರಿತು ಚರ್ಚೆ ನಡೆಸುತ್ತಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ತಕ್ಷಣವೇ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಬಿಡಬೇಕು - ಗೃಹ ಸಚಿವರ ಆಗ್ರಹ
ಕಾಂಗ್ರೆಸ್ ಪಕ್ಷದ ನಾಯಕರಿಗೆ ನ್ಯಾಯಾಲಯದ ಮೇಲೆ ಗೌರವ ಇದ್ದರೆ, ತಕ್ಷಣ ತಮ್ಮ ರಾಜಕೀಯ ಪ್ರೇರಿತ ಪಾದಯಾತ್ರೆಯನ್ನು ಕೈಬಿಡಬೇಕು. ಮಹಾ ಜನತೆಯ ಜೀವ ಹಾಗೂ ಬದುಕನ್ನು ಕಾಪಾಡಲು ಶ್ರಮಿಸುತ್ತಿರುವ ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇಂದು ಬೆಳಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಗೂ ದೇಶದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಸಂಕಷ್ಟದ ಸಮಯದಲ್ಲಿ ಅತ್ಯಂತ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ ಹಾಗೂ ಸರ್ಕಾರಕ್ಕೆ ರಚನಾತ್ಮಕ ಬೆಂಬಲ ನೀಡುವುದರ ಬದಲು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತೊಡಗಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಉಚ್ಚ ನ್ಯಾಯಾಲಯವು ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕಠಿಣ ಶಬ್ದಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ. ಕೊರೊನಾ ಸೋಂಕು ಹರಡುವಿಕೆ ಅತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದೆ. ನ್ಯಾಯಾಲಯದ ಅನಿಸಿಕೆಯನ್ನು ಲೆಕ್ಕಿಸದೆ ಈ ಕಠೋರ ಮನೋಭಾವನೆಯನ್ನು ತೋರಿಸುತ್ತಿರುವ ಕಾಂಗ್ರೆಸ್ ನಾಯಕರು ಜನರ ಆಕ್ರೋಶಕ್ಕೆ ಒಳಗಾಗಿದ್ದಾರೆ. ಈಗಲಾದರೂ ತಪ್ಪು ತಿದ್ದಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಶಿವಶಂಕರ ರೆಡ್ಡಿ ಹಾಗೂ ಮಾಜಿ ಶಾಸಕಿ ಮಲ್ಲಾಜಮ್ಮ ಹಾಗೂ ಇತರರು ಕೊರೊನಾದಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈಗಲಾದರೂ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಳ್ಳಬೇಕು ಹಾಗೂ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳುವ ಮೊದಲೇ ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಪಾದಯಾತ್ರೆ ಹಿಂದೆಗೆದುಕೊಳ್ಳಬೇಕು ಎಂದು ಆರಗ ಜ್ಞಾನೇಂದ್ರ ಆಗ್ರಹಿಸಿದರು.