ಬೆಂಗಳೂರು: ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ಸಂಬಂಧ ಕೇವಲ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕಷ್ಟೇ ಸೀಮಿತಗೊಳಿಸದೆ, ಕನ್ನಡಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಸದಾ ಜೊತೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ತಂತ್ರಜ್ಞಾನದ ಬಳಕೆಯ ಮೂಲಕ ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಾಹಿತ್ಯ ಪರಿಷತ್ತಿನ ಶ್ರೀಮಂತ ಸಾಹಿತ್ಯ ಭಂಡಾರವನ್ನು ಜನರಿಗೆ ಪರಿಚಯಿಸಲು ತಂತ್ರಜ್ಞಾನದ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಇದರೊಂದಿಗೆ ಉತ್ಕೃಷ್ಟ, ಸಮಾಜಮುಖಿ ಸಾಹಿತ್ಯ ರಚನೆಗೆ ಉತ್ತೇಜನ ನೀಡುವ ಕೆಲಸ ಮಾಡುವಂತೆ ತಿಳಿಸಿದರು.
ಸಮಾರಂಭದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಅಶ್ವತ್ಥನಾರಾಯಣ, ಶಿವರಾಮ ಹೆಬ್ಬಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಶಾಸಕ ನೆಹರು ಓಲೆಕಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ :ಮುಂದಿನ ವರ್ಷ ಯುವ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ