ಬೆಂಗಳೂರು :ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸುವ ಜೊತೆಗೆ ಕೋವಿಡ್-19 ನಿಯಂತ್ರಣದತ್ತವೂ ಕ್ರಮವಹಿಸುವಂತೆ ಸಿಎಂ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹಕ್ಕೆ ಒಳಗಾಗುವ ಸಾಧ್ಯತೆ ಇರುವ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ ಯಡಿಯೂರಪ್ಪ, ಡಿಸಿಗಳಿಗೆ ಕೆಲ ಸಲಹೆ, ಸೂಚನೆಗಳನ್ನು ನೀಡಿದರು.
ಪ್ರವಾಹ ಪರಿಸ್ಥಿತಿ ನಿಭಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ಓದಿ: Congress ಮುಂದಿನ ಸಿಎಂ ಯಾರು?: ಜಮೀರ್ -DKS ವಾಕ್ ಠಕ್ಕರ್
ಜಿಲ್ಲಾ ಮಟ್ಟದಲ್ಲಿ ನೀವು ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಿ, ಪ್ರವಾಹ ಪರಿಸ್ಥಿತಿ ಎದುರಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಜನ, ಜಾನುವಾರುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಇದರೊಂದಿಗೆ ಕೋವಿಡ್-19 ಸೋಂಕಿನ ಕುರಿತು ಸಹ ಎಚ್ಚರಿಕೆ ವಹಿಸಬೇಕಿದೆ.
ಜಿಲ್ಲೆ ಮತ್ತು ತಾಲೂಕು ಮಟ್ಟಗಳಲ್ಲಿ ಸಹಾಯವಾಣಿ ಸ್ಥಾಪನೆ, ದೂರವಾಣಿ ಮತ್ತಿತರ ಸಂಪರ್ಕ ಸಾಧನಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳುವುದು ಹಾಗೂ ತುರ್ತು ನಿರ್ವಹಣೆಗೆ ಬೇಕಾದ ಸಾಮಾಗ್ರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆ, ಅವರಿಗೆ ಅಗತ್ಯ ಮೂಲಸೌಕರ್ಯಗಳುಳ್ಳ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಅತಿ ಅಗತ್ಯವಾಗಿದೆ. ಪ್ರವಾಹ ನಿರ್ವಹಣೆಗಾಗಿ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು, ಸ್ವಯಂಸೇವಕರ ಸಹಕಾರವನ್ನು ಪಡೆದುಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಹದ ಪರಿಣಾಮ ಅತ್ಯಂತ ಕಡಿಮೆಯಾಗುವಂತೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಪ್ರವಾಹದ ಹಿನ್ನೆಲೆಯಲ್ಲಿ ಸ್ಥಳಾಂತರಿಸಿದ ಕೆಲವು ಗ್ರಾಮಗಳಿಗೆ ಗ್ರಾಮಸ್ಥರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಈ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ, ಸ್ಥಳಾಂತರಿಸಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.
ಓದಿ: ಚಿಕ್ಕಪಡಸಲಗಿ ಬ್ಯಾರೇಜ್ ಜಲಾವೃತ; ಅಪಾಯ ಲೆಕ್ಕಿಸದೆ ಯುವಕರ ಸೆಲ್ಫಿ ಕ್ರೇಜ್
ರಾಜ್ಯ ಮಟ್ಟದಲ್ಲಿ ಅಪರ ಪ್ರಧಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಋತುಮಾನ ಪರಿಸ್ಥಿತಿ ಅವಲೋಕನ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯ ಪ್ರವಾಹ ನಿರ್ವಹಣಾ ಕ್ರಿಯಾ ಯೋಜನೆ 2021ನ್ನು ಸಿದ್ದಪಡಿಸಲಾಗಿದೆ. ರಾಜ್ಯದಲ್ಲಿ 1710 ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಲಾಗಿದೆ. ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣೆ ಕ್ರಿಯಾ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗಿದೆ.
ಈ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಲು ತರಬೇತಿ ನೀಡಲಾಗಿದೆ. ಪ್ರವಾಹ ಪರಿಸ್ಥಿತಿಗಳಲ್ಲಿ ಜಲಾಶಯಗಳ ಹರಿವು ನಿರ್ವಹಣೆಗೆ ಬೇಕಾದ ಮಾಹಿತಿ ವಿನಿಮಯಕ್ಕೆ ಅಂತರ್ರಾಜ್ಯ ಸಮನ್ವಯತೆ ಸಾಧಿಸಲಾಗಿದೆ. ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಕಾರ್ಯಪಡೆ, ಕಾರ್ಯಾಚರಣೆ ತಂಡಗಳನ್ನು ಹಾಗೂ ವಾಟ್ಯ್ಆ್ಯಪ್ ತಂಡಗಳ ರಚನೆ ಮಾಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ವಿಪತ್ತು ನಿರ್ವಹಣೆಯ ವಿವಿಧ ಹಂತಗಳಲ್ಲಿ ವಿವಿಧ ಇಲಾಖೆಗಳ ಪಾತ್ರ ಹಾಗೂ ಜವಾಬ್ದಾರಿಗಳನ್ನು ಗುರುತಿಸಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ಪ್ರವಾಹ ಮುನ್ಸೂಚನೆ ಕೋಶವನ್ನು ಸ್ಥಾಪಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಅಗತ್ಯ ಪರಿಕರಗಳ ಕ್ರೋಢೀಕರಣ ಹಾಗೂ ಸಾಮಗ್ರಿಗಳನ್ನು ಒದಗಿಸಲಾಗಿದೆ. ಪ್ರವಾಹ ರಕ್ಷಣಾ ಕಾರ್ಯಾಚರಣೆಗಾಗಿ 4 ರಾಷ್ಟ್ರೀಯ ವಿಪತ್ತು ಸ್ಪಂದನಾ ತಂಡ (NDRF)ಗಳನ್ನು ರಾಯಚೂರು, ಕೊಡಗು, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.
ರಾಜ್ಯದಿಂದ ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಒಳಗೊಂಡ ರಾಜ್ಯ ವಿಪತ್ತು ಸ್ಪಂದನಾ (SDRF) ತಂಡವನ್ನು ಬಲಪಡಿಸಿ, ತುರ್ತು ಪರಿಹಾರಕ್ಕೆ ಬೇಕಾದ ಪರಿಕರ ಸಾಮಾಗ್ರಿಗಳೊಂದಿಗೆ ಸನ್ನದ್ದಗೊಳಿಸಿದೆ. ಜಿಲ್ಲಾಧಿಕಾರಿಗಳ ಬಳಿ ವಿಪತ್ತು ನಿರ್ವಹಣೆಗೆ ಸುಮಾರು ಸಾವಿರ ಕೋಟಿ ರೂ.ಗಳಷ್ಟು ಅನುದಾನ ಲಭ್ಯವಿದೆ ಎಂದು ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ವಿವರಿಸಿದರು.