ಬೆಂಗಳೂರು :ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಷ್ಠಾನ ಸಂಬಂಧ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ, ಕೃಷ್ಣಾ ಯೋಜನೆಗೆ ನೋಟಿಫಿಕೇಶನ್ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು, ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಅನುಮತಿ ನೀಡಿಕೆ, ಎತ್ತಿನ ಹೊಳೆ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
ಆದಷ್ಟು ಬೇಗ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಮೇಕೆದಾಟು ಯೋಜನೆ ಕಾಮಗಾರಿ ಅನುಷ್ಠಾನಗೊಳಿಸುತ್ತೇವೆ. ತಮಿಳುನಾಡಿನ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಎಲ್ಲಾ ನೀರಾವರಿ ಯೋಜನೆಗಳ ಕಾಮಗಾರಿ ಮುಗಿಸುತ್ತೇವೆ. ಕೇಂದ್ರ ಸಚಿವರು ನಮ್ಮ ನೀರಾವರಿ ಯೋಜನೆಗಳಿಗೆ ಶೀಘ್ರ ಅನುಮತಿ ನೀಡುವ ಸಂಬಂಧ ಭರವಸೆ ನೀಡಿದ್ದಾರೆ.
ಇದೇ ವೇಳೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಇನ್ನೂ 25 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.