ಬೆಂಗಳೂರು: ರಾಜ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಮುಂದಿನ ಲೋಕಸಭೆ ಚುನಾವಣೆ ಸೀಟು ಹಂಚಿಕೆ ದೊಡ್ಡ ಸವಾಲಾಗಿ ಪರಿಣಮಿಸಿ, ಉಭಯ ಪಕ್ಷಗಳ ನಡುವೆ ಭಿನ್ನಮತಕ್ಕೆ ಕಾರಣವಾಗಲಿದೆ ಎನ್ನಲಾಗಿದೆ.
ಕಳೆದ ವಾರ ಹಳೆ ಮೈಸೂರು ಭಾಗದ ಕಾಂಗ್ರೆಸ್ ಮುಖಂಡರ ಸಭೆ ನಡೆಸಿ, ಹಾಸನ ಹಾಗೂ ಮಂಡ್ಯದಿಂದ ‘ಕೈ’ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇನ್ನು ಜೆಡಿಎಸ್, ಗೆಲ್ಲುವ ಅವಕಾಶ ಹೆಚ್ಚಿರುವ ಮಂಡ್ಯ, ಹಾಸನ, ಶಿವಮೊಗ್ಗ, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರ ಸೇರಿದಂತೆ ಕಾಂಗ್ರೆಸ್ ಸಂಸದರಿರುವ ಕ್ಷೇತ್ರಗಳಾದ ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದ ಮೇಲೆ ಕಣ್ಣಿಟ್ಟಿದೆ ಎನ್ನಲಾಗಿದೆ.
ಇದಕ್ಕೆ ಪೂರಕ ಎಂಬಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ ದೇವೇಗೌಡರ ಕೈ ಬಲಪಡಿಸಲು ಹತ್ತು ಸಂಸದರನ್ನು ರಾಜ್ಯದಿಂದ ಕಳಿಸಿಕೊಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ ಹೇಳಿಕೆಯಿಂದ ಹಾಲಿ ಕಾಂಗ್ರೆಸ್ ಸಂಸದರಿಗೆ ನಡುಕ ಆರಂಭವಾಗಿದ್ದು, ಅವರೆಲ್ಲ ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಮಲ್ಲಿಕಾರ್ಜುನ್ ಖರ್ಗೆ ಸಹಾಯ ಕೋರಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲು ರಣತಂತ್ರ ರೂಪಿಸಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ. ಇನ್ನು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಗೆ ಸಿಎಂ ಹೆಚ್ಡಿಕೆ ಸಿದ್ಧತೆ ನಡೆಸಿದ್ದು, ಇದಕ್ಕೂ ಮುನ್ನವೇ ಮೈತ್ರಿ ಪಕ್ಷಗಳ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ ಎನ್ನಲಾಗಿದೆ.