ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿ ವಿಚಾರವಾಗಿ ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 60ರ ಅಡಿ ಇಂದು ವಿಧಾನಸಭೆಯ ಅಧಿವೇಶನದಲ್ಲಿ ಪ್ರಶ್ನೋತ್ತರ, ಶೂನ್ಯವೇಳೆಯ ನಂತರ ವಿಷಯ ಪ್ರಸ್ತಾಪಿಸುತ್ತೇವೆ. ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿ ವಿಷಯದ ಬಗ್ಗೆ ನಿಲುವಳಿ ಸೂಚನೆಯನ್ನು ಕೊಡುತ್ತೇವೆ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿರುವ ಪತ್ರದಲ್ಲಿ ತಿಳಿಸಿದೆ.
ಇತ್ತೀಚಿಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೆಳೆದು ನಿಂತ ರೈತರ ಬೆಳೆ ಸೇರಿದಂತೆ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿವೆ/ನಾಶವಾಗಿವೆ. ಜನ, ಜಾನವಾರುಗಳಿಗೆ ಪ್ರಾಣ ಹಾನಿಯಾಗಿದೆ. ಇದರಿಂದಾಗಿ ಸಾವಿರಾರು ಕೋಟಿ ರೂ.ಗಳು ನಷ್ಟವಾಗಿದೆ. ಹಲವಾರು ಕಾರಣಗಳಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ರಾಜ್ಯದ ಜನತೆಯನ್ನು ಅತಿವೃಷ್ಟಿಯು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ.