ಬೆಂಗಳೂರು:ರಾಜ್ಯ ವಿಧಾನ ಮಂಡಲ ಮಳೆಗಾಲದ ಅಧಿವೇಶನ ನಡೆಸಲು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು, ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲು ಮಹತ್ವದ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶೀಘ್ರವೇ ಸಭೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಹಾಗೂ ಇತರ ಹಿರಿಯ ಕಾಂಗ್ರೆಸ್ ನಾಯಕರು ಸಭೆ ಸೇರಿ ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಒಂದು ತೀರ್ಮಾನ ಕೈಗೊಳ್ಳಲಿದ್ದಾರೆ.
ಸಿದ್ದರಾಮಯ್ಯ ಸದ್ಯ ರಾಜ್ಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಡಿಕೆಶಿ ಸದ್ಯ ದಿಲ್ಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಮಾಲೋಚಿಸಿ ವಾಪಸಾಗುತ್ತಿದ್ದಾರೆ. ನಾಳೆ ಶಿವಕುಮಾರ್ ಬೇರೊಂದು ಕಾರ್ಯಕ್ರಮದಲ್ಲಿ ನಿರತರಾಗಿದ್ದಾರೆ. ಶನಿವಾರ ಇಲ್ಲವೇ ಸೋಮವಾರ ಸಭೆ ಸೇರಿ ಚರ್ಚಿಸಿ ನಂತರ ತಮ್ಮ ತೀರ್ಮಾನವನ್ನು ಸಿಎಂ ಹಾಗೂ ವಿಧಾನಸಭಾಧ್ಯಕ್ಷ ಮತ್ತು ವಿಧಾನ ಪರಿಷತ್ ಸಭಾಪತಿಗಳಿಗೆ ಸಲ್ಲಿಸಲು ತೀರ್ಮಾನಿಸಿದ್ದಾರೆ.