ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರ ಸಭೆ ಆರಂಭವಾಗಿದೆ. ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಭೆ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಕಾಂಗ್ರೆಸ್ ಪಕ್ಷದ ಆರೋಗ್ಯ ಘಟಕದ ನಿರ್ವಹಣೆ, ಕೋವಿಡ್ ವ್ಯಾಪಕವಾಗಿ ಹೆಚ್ಚುತ್ತಿರುವ ಮಹಾನಗರಗಳಲ್ಲಿ ಬೆಂಗಳೂರು ನಂಬರ್ ಒನ್ ಆಗಿರುವುದು, ಕೊರೊನಾಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವುದು, ಕಳೆದ ಒಂದು ವಾರದಿಂದ ಗ್ರಾಮೀಣ ಭಾಗದಲ್ಲಿಯೂ ಮಹಾಮಾರಿ ವ್ಯಾಪಿಸುತ್ತಿರುವುದು, ಆಮ್ಲಜನಕ ಕೊರತೆ ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕದೆ ಇರುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಕಾಂಗ್ರೆಸ್ ನಾಯಕರು ಈ ಸಂದರ್ಭ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.