ಬೆಂಗಳೂರು :ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಒದಗಿಸಬೇಕು ಹಾಗೂ ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ಬುಧವಾರ ಸಭೆ ನಡೆಸಿ ನಿರ್ಧಾರ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.
ಮೀಸಲಾತಿಗಾಗಿ ಆಗ್ರಹಿಸಿ ಗುರುವಾರ ಧರಣಿ ಆರಂಭಿಸಿದ್ದ ಕಾಂಗ್ರೆಸ್ ಶಾಸಕರು, ಇಂದು (ಶುಕ್ರವಾರ) ಕೂಡ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮುಂದಿನ ಬುಧವಾರ ಪ್ರತಿಪಕ್ಷದ ನಾಯಕರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೀಸಲಾತಿ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಮಯಾವಕಾಶ ನೀಡಿ ಸಹಕರಿಸಬೇಕು. ಧರಣಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.