ಬೆಂಗಳೂರು: ಮಂಗಳೂರು ನಗರ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕ ಕುಸಿದು ಅನಾಹುತ ಸಂಭವಿಸಿರುವ ಹಿನ್ನೆಲೆ ಹೊಸದಾಗಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಸಿದ್ಧವಿದ್ದು, ಅದಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಪಾಲಿಕೆ ಆಯುಕ್ತರು, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಕಾಯ್ದೆ-2013ರ ಪ್ರಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪಾಲಿಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಪಾಲಿಕೆ ಪ್ರಸ್ತಾವನೆಯನ್ನು ಸರ್ಕಾರ ಪರಿಗಣಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತು.