ಕರ್ನಾಟಕ

karnataka

ETV Bharat / city

ಕೋಳಿ ಮಾಂಸ, ಮೊಟ್ಟೆಯಿಂದ ಕೊರೊನಾ ಹರಡುವುದಿಲ್ಲ: ಸಚಿವ ಪ್ರಭು ಚವ್ಹಾಣ್ - ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ನ್ಯೂಸ್​

ಕೊರೊನಾ ಸೋಂಕು ಕೋಳಿಗಳಿಂದ ಹರಡುವುದಿಲ್ಲ. ತಪ್ಪು ಸಂದೇಶಗಳನ್ನು ನಂಬಬೇಡಿ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

Prabhu Chauhan
ಪ್ರಭು ಚವ್ಹಾಣ್

By

Published : Mar 4, 2020, 5:25 AM IST

ಬೆಂಗಳೂರು: ಕೊರೊನಾ ಸೋಂಕು ಕೋಳಿಗಳಿಂದ ಹರಡುವುದಿಲ್ಲ. ಕೋಳಿ‌ ಮಾಂಸ ಮತ್ತು ಮೊಟ್ಟೆ ಕೊರೊನಾದಿಂದ ಸುರಕ್ಷಿತವಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು, ಇತ್ತೀಚೆಗೆ ಚೀನಾ ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ, ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ. ನಮ್ಮ ದೇಶದಲ್ಲಿ ಕೋಳಿಗಳಿಗೆ ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ ಹಾಗೂ ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕು ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದಾಗಿ ಕುಕ್ಕಟ ಉದ್ಯಮಕ್ಕೆ ಪೆಟ್ಟು ಬೀಳುತ್ತಿದೆ. ಸಾಮಾನ್ಯವಾಗಿ ಕೋಳಿ ಮಾಂಸವನ್ನು 100 ಡಿಗ್ರಿ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ್ಲ. ಆದ್ದರಿಂದ, ಸಾರ್ವಜನಿಕರು ಕೊರೊನಾ ವೈರಾಣು ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಕೊಡಬಾರದು ಎಂದು ಮನವಿ ಮಾಡಿದ್ದಾರೆ.

ಈ ರೀತಿಯ ವಂದತಿಗಳನ್ನು ಹರಡುವುದರಿಂದ ಸಾರ್ವಜನಿಕರಿಗೆ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಯಿಂದ ದೊರಕುವ ಪೋಷಕಾಂಶಗಳ ಕೊರತೆ ಎದುರಾಗುತ್ತದೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಬಾಣಂತಿಯರು ಪೋಷಕಾಂಶ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ವದಂತಿಗಳು ಸಾಮಾಜಿಕ ಆಹಾರದ ಸ್ವಾಸ್ಥ್ಯವನ್ನು ಮತ್ತಷ್ಟು ಹದಗೆಡಿಸುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಕೋಳಿ ಮಾಂಸ ಮತ್ತು ಮೊಟ್ಟೆ ದೇಹಕ್ಕೆ ಉತ್ತಮ ಪ್ರೋಟಿನ್ ಪೂರೈಸುವ ಆಹಾರವಾಗಿವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾರೂ ಇಂತಹ ವದಂತಿಗಳನ್ನು ಹರಡಬಾರದು ಎಂದು ಈ ಮೂಲಕ ಮನವಿ ಮಾಡಲಾಗಿದೆ. ಸಾರ್ವಜನಿಕರಲ್ಲಿ ಯಾವುದೇ ತರಹದ ಸಂದೇಹಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ 080-23418075, 080- 23416431, ಸಹಾಯವಾಣಿ: 1800 425 012, 080-23417100 ಸಂಪರ್ಕಿಸಲು ತಿಳಿಸಿದ್ದಾರೆ.

ABOUT THE AUTHOR

...view details