ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸಲು ನಿರಾಕರಿಸಿದ ವಿಶೇಷ ನ್ಯಾಯಾಲಯದ ಕ್ರಮವನ್ನು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಪ್ರಶ್ನಿಸಿದ್ದು, ಈ ಸಂಬಂಧ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅನುಸಾರ ಸರ್ಕಾರಿ ಹುದ್ದೆಯಲ್ಲಿರುವ ಸಿಎಂ ಯಡಿಯೂರಪ್ಪ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರಿಂದ ಪೂರ್ವಾನುಮತಿ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ಟಿ.ಜೆ.ಅಬ್ರಹಾಂ ಅವರ ಅರ್ಜಿ ವಜಾ ಮಾಡಿತ್ತು. ವಿಶೇಷ ನ್ಯಾಯಾಲಯದ ಈ ಆದೇಶ ಪ್ರಶ್ನಿಸಿ ಇದೀಗ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಪ್ರಕರಣದ ಹಿನ್ನೆಲೆ:
ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹಾಗೂ ಇತರೆ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಿಎಂ ಕುಟುಂಬದವರು ನಕಲಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಹೀಗಾಗಿ ಇವರ ವಿರುದ್ಧ ತನಿಖೆ ನಡೆಸುವಂತೆ 2020ರ ನವೆಂಬರ್ 19ರಂದು ಎಸಿಬಿಗೆ ಟಿ.ಜೆ. ಅಬ್ರಹಾಂ ದೂರು ನೀಡಿದ್ದರು. ಆದರೆ, ಎಸಿಬಿ ಅಧಿಕಾರಿಗಳು 2020ರ ಡಿಸೆಂಬರ್ 15ರಂದು ದೂರು ಕೈಬಿಟ್ಟಿದ್ದರು.
ಈ ಹಿನ್ನೆಲೆಯಲ್ಲಿ 2021ರ ಜೂನ್ 6ರಂದು ವಿಶೇಷ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದ ಟಿ.ಜೆ.ಅಬ್ರಹಾಂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಆಪ್ತರಾದ ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ, ಸಂಜಯಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ ಪ್ರಕಾಶ್, ಕ್ರೆಸೆಂಟ್ ಹೋಟೆಲ್ ಮಾಲೀಕರಾದ ಕೆ.ರವಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7, 8, 9, 10, 13 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 383, 384, 415, 418, 420 ಹಾಗೂ 120 ಬಿ ಅಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಕ್ತ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ಈ ಅರ್ಜಿಯನ್ನು ವಿಶೇಷ ನ್ಯಾಯಾಲಯ ಪೂರ್ವಾನುಮತಿ ಪಡೆದಿಲ್ಲವೆಂದು ಪರಿಗಣಿಸಲು ನಿರಾಕರಿಸಿತ್ತು.
ಇದನ್ನೂ ಓದಿ:'ಮೈತ್ರಿ' ಮುರಿದು ಗದ್ದುಗೆ ಏರಿದ ಸಿಎಂಗೆ 2 ವರ್ಷ: ಯಡಿಯೂರಪ್ಪ ಕಾಡಿದ ಪ್ರಕರಣಗಳು ಯಾವುವು ಗೊತ್ತಾ..!