ಬೆಂಗಳೂರು :ನ್ಯಾಯಾಲಯದ ಕಲಾಪಗಳನ್ನು ಲೈವ್ ಸ್ಟ್ರೀಮಿಂಗ್ ಮಾಡುವುದಕ್ಕೆ ಸಂಬಂಧಿಸಿದ ನಿಯಮ ರೂಪಿಸುವ ಪ್ರಕ್ರಿಯೆಗೆ ವೇಗ ನೀಡುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.
ಇ-ಫೈಲಿಂಗ್ ಸೌಲಭ್ಯದ ಕುರಿತು ವಕೀಲ ದಿಲ್ರಾಜ್ ರೋಹಿತ್ ಎಂಬುವರು ಸೇರಿ ಇತರರು 2019ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಈ ವೇಳೆ ಅರ್ಜಿಯಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರನ್ನು ಪ್ರತಿನಿಧಿಸುತ್ತಿರುವ ವಕೀಲೆ ಬಿ ವಿ ವಿದ್ಯುಲ್ಲತಾ ವಾದಿಸಿ, ಲೈವ್ ಸ್ಟ್ರೀಮಿಂಗ್‌ಗೆ ಸಂಬಂಧಿಸಿದ ಕರಡು ನಿಯಮಗಳು ಹೈಕೋರ್ಟ್ ಸಮಿತಿ ಮುಂದೆ ಬಾಕಿ ಇವೆ ಎಂದು ಪೀಠದ ಗಮನಕ್ಕೆ ತಂದರು.
ವಾದ ಪರಿಗಣಿಸಿದ ಪೀಠ, ನ್ಯಾಯಾಲಯದ ಕಲಾಪಗಳನ್ನು ಲೈವ್ ಸ್ಟ್ರೀಮಿಂಗ್ ಮಾಡುವುದಕ್ಕೆ ಸಂಬಂಧಿಸಿದ ನಿಯಮ ರೂಪಿಸುವ ಪ್ರಕ್ರಿಯೆಗೆ ವೇಗ ನೀಡಬೇಕು. ಈ ವಿಚಾರದಲ್ಲಿ ಆಗಿರುವ ಬೆಳವಣಿಗೆಗಳನ್ನು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು ಎಂದು ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.