ಬೆಂಗಳೂರು:ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಕೊರೊನಾ ವೈರಾಣು ನಮ್ಮ ಮಧ್ಯದಲ್ಲಿಯೇ ಇದೆ. ನಾವು ಕೂಡ ನಿರ್ಲಕ್ಷ್ಯ ಮಾಡಿದರೆ ಮತ್ತೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದರು.
ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಶೇ. 95.05ರಷ್ಟು ಗುಣಮುಖರಾಗಿದ್ದು, 30743 ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ ಇದೆ ಎಂದರು.
ಇನ್ನು ಬೆಂಗಳೂರಿನಲ್ಲಿ ಕೋವಿಡ್ ಮರಣ ಪ್ರಮಾಣ ಶೇ. 00.99ಕ್ಕೆ ಇಳಿಕೆಯಾಗಿದೆ. ಜನರು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ವೈದ್ಯ ಶಾಸಕರೊಂದಿಗಿನ ಸಭೆಗೆ ಎಲ್ಲರಿಗೂ ಆಹ್ವಾನ ನೀಡಲಾಗಿತ್ತು. ರಾಜಕೀಯ ಬೆರೆಸದೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಶ್ರೀರಾಮುಲು ಅವರು ಬೇರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಬಂದಿಲ್ಲ. ಹಾಗೆಯೇ ಮಾಜಿ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರಿಗೂ ಆಹ್ವಾನ ನೀಡಲಾಗಿದೆ. ಬರುವುದು, ಬಿಡುವುದು ಅವರವರಿಗೆ ಬಿಟ್ಟ ವಿಚಾರ. ಮುಂದಿನ ಸಭೆಗಳಿಗೆ ಅವರು ಬರುವ ವಿಶ್ವಾಸ ಇದೆ ಎಂದು ಹೇಳಿದರು.