ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನ್ಯಾಯಾಲಯ ಈ ಹಿಂದೆ ನೀಡಿರುವ ನಿರ್ದೇಶನಗಳನ್ನು ಪಾಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕೋವಿಡ್ ನಿಯಂತ್ರಣ, ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಹಿಂದಿನ ವಿಚಾರಣೆಗಳ ವೇಳೆ ನೀಡಿರುವ ನಿರ್ದೇಶಗಳನ್ನು ಸರ್ಕಾರ ಪಾಲಿಸಬೇಕು ಎಂದು ಸೂಚಿಸಿತು.
ಸಾರ್ವಜನಿಕರು ಒಟ್ಟಿಗೆ ಸೇರುವಂತಹ ಹೋಟೆಲ್, ರೆಸ್ಟೋರೆಂಟ್, ದೇವಸ್ಥಾನ, ಮಾರ್ಕೆಟ್ ಮತ್ತಿತರೆ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ಗಳನ್ನು ಒದಗಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ಇನ್ನು ಥಿಯೇಟರ್, ಜಿಮ್, ಕ್ಲಬ್ಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಬಗ್ಗೆ ಅರ್ಜಿದಾರರು ಆಕ್ಷೇಪಿಸಿದ್ದು, ಮುಂದಿನ ವಿಚಾರಣೆ ವೇಳೆ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿರುವ ಆದೇಶವನ್ನು ಹಾಜರುಪಡಿಸುವಂತೆ ಸೂಚಿಸಿತು.