ಬೆಂಗಳೂರು: ನೀವೆಲ್ಲರೂ ದೇಶಕ್ಕೆ ದೊಡ್ಡ ಆಸ್ತಿಯಾಗಬೇಕು. ನಿಮ್ಮನ್ನು ಸರಿಯಾದ ರೀತಿಯಲ್ಲಿ ತಯಾರು ಮಾಡಬೇಕಿರುವುದು ನಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಈ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೆಲಸ ಮಾಡುತ್ತಿದೆ. ನಿಮಗೆ ಸಾಧ್ಯವಾದಷ್ಟು ಉತ್ತಮ ಗುಣಮುಟ್ಟದ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದು ಗ್ಲೋಬಲ್ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದರು.
ನಾವು ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸುತ್ತಿದ್ದೇವೆ. ಶತಮಾನೋತ್ಸವ ಆಚರಣೆ ಮಾಡಲು ನಮಗೆ ಅವಕಾಶ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ತಮ್ಮ ತ್ಯಾಗ ಬಲಿದಾನಗಳ ಮೂಲಕ ನಮಗೆ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಎಲ್ಲವನ್ನೂ ಕೊಟ್ಟಿದ್ದಾರೆ. ಹೀಗಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿರುವುದು ನಮ್ಮೆಲ್ಲರ ಭಾಗ್ಯ ಎಂದರು.