ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು. ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ನೀಡಿದೆ. ಈಗಾಗಲೇ ಪೊಲೀಸ್ ಸಿಬ್ಬಂದಿ ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿ ಅವರ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಟಾಂಗ್ ಕೊಟ್ಟರು.