ಬೆಂಗಳೂರು:ಮಧುಗಿರಿಯ ಮಾಜಿ ಶಾಸಕ ಕೆ ಎನ್ ರಾಜಣ್ಣ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಬಗ್ಗೆ ನೀಡಿರುವ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ನಾನು ಹಾಗೂ ಪಕ್ಷದ ವರಿಷ್ಠರು ಸೂಚಿಸಿದ್ದೇವೆ. ಅವರು ಕೂಡ ಗೌರವಯುತವಾಗಿ ಕ್ಷಮೆ ಕೇಳಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡೋಣ. ನಮ್ಮನ್ನು ಒಂದಲ್ಲಾ ಒಂದು ದಿನ ಹೊತ್ತುಕೊಂಡು ಹೋಗಬೇಕು. ಇದೇ ಪ್ರಕೃತಿ ನಿಯಮ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಶೃಂಗೇರಿ ಶಾರದಾ ಪೀಠದ ಸ್ವಾಮೀಜಿಗಳು ಮನೆಗೆ ಬಂದಿದ್ದು ಗುರುವಂದನೆ ಮಾಡಿದ್ದೇವೆ. ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ ಈ ಪೀಠ ಎಲ್ಲಾ ಜಾತಿ, ಧರ್ಮದವರಿಗೂ ಆಶೀರ್ವಾದ ಮಾಡಿಕೊಂಡು, ಧರ್ಮದ ಸೇವೆ ಮಾಡಿಕೊಂಡು ಬಂದಿದೆ. ನಾನು ಶ್ರೀಗಳಿಗೆ ಆಹ್ವಾನ ನೀಡಿದ್ದೆ. ಅವರು ಬಂದು ನನಗೆ, ನನ್ನ ಕುಟುಂಬ ಸದಸ್ಯರು ಹಾಗೂ ಸ್ನೇಹಿತರಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.
ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಗೆಲುವು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಎಲ್ಲರೂ ಮಾತನಾಡುತ್ತಿದ್ದಾರೆ. ಈ ಅವಕಾಶವನ್ನು ನಾವು ಬಳಸಿಕೊಳ್ಳಬೇಕು. ಪಕ್ಷದ ವತಿಯಿಂದ ನಾವು ಪ್ರತ್ಯೇಕ ಸಮೀಕ್ಷೆ ನಡೆಸಿದ್ದು, ವರದಿ ಪಕ್ಷದ ಪರವಾಗಿದೆ. ಇತ್ತೀಚೆಗಿನ ಚುನಾವಣೆಗಳ ಫಲಿತಾಂಶ ನೋಡಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನವಾಗಿದೆ ಎಂದು ತಿಳಿಸಿದರು.
ಸಾಮೂಹಿಕ ನಾಯಕತ್ವ: ಪಕ್ಷ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುವುದೇ ಎಂಬ ಪ್ರಶ್ನೆಗೆ, ರಾಹುಲ್ ಗಾಂಧಿ ಹಾಗೂ ಪಕ್ಷದ ವರಿಷ್ಠರು ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ತೀರ್ಮಾನಿಸಿದ್ದಾರೆ' ಎಂದರು.